1985 ರಿಂದ 2020 ರವರೆಗಿನ ಹಗರಣ ತನಿಖೆಗೆ ಎಸ್ಐಟಿ ರಚನೆಗೆ ಬಿಡಿಎ ಮನವಿ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ 1985 ರಿಂದ ಇಲ್ಲಿವರೆಗೆ ನಡೆದಿರುವ ಹಗರಣಗಳ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಮಂಗಳವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವಿಶ್ವನಾಥ್ ಅವರು, ಇತ್ತೀಚೆಗೆ ಬಿಡಿಎ ಮತ್ತು ಆಯುಕ್ತರು ಹಾಗೂ ಅಧಿಕಾರಿಗಳ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಡವರ ಹೆಸರಿನಲ್ಲಿ ಪಟ್ಟಭದ್ರ ಹಿತಾಸಕ್ತಿಗಳಿಗೆ ನಿವೇಶನಗಳನ್ನು ಹಂಚಿಕೆ ಮಾಡಲು ಸಿದ್ಧತೆ ನಡೆಸಿದ್ದ ಜಾಲವನ್ನು ಬೇಧಿಸಿರುವ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿತ್ತು ಎಂದರು.

ಕಳೆದ ಹಲವು ವರ್ಷಗಳಿಂದ ಬಿಡಿಎಗೆ ಸೇರಿದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ನಿವೇಶನಗಳನ್ನು ಏಜೆಂಟರ ಜೊತೆ ಶಾಮೀಲಾಗಿ ಪಟ್ಟಭದ್ರ ಹಿತಾಸಕ್ತಿಗಳಿಗೆ ಮಾರಾಟ ಮಾಡುತ್ತಾ ಬರಲಾಗಿದೆ. ಇದೀಗ ನಕಲಿ ದಾಖಲೆ ಸೃಷ್ಟಿಸಿ ನಿವೇಶನಗಳನ್ನು ಹಂಚಿಕೆ ಮಾಡಲು ಹೊರಟಿದ್ದ ಪ್ರಕರಣವು ಬಿಡಿಎಗೆ ಒಂದು ಬಹುದೊಡ್ಡ ಕಪ್ಪುಚುಕ್ಕೆಯಾಗಿದೆ. ಇದರಿಂದಾಗಿ ಭ್ರಷ್ಟ ಅಧಿಕಾರಿಗಳು ಸಾರ್ವಜನಿಕರಲ್ಲಿ ಬಿಡಿಎಗೆ ಇದ್ದ ವಿಶ್ವಾಸ ಹೊರಟು ಹೋಗುವಂತೆ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ 1985 ರಿಂದ ಇಲ್ಲಿವರೆಗೆ ನಡೆದಿರುವ ಹಗರಣಗಳ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚನೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಆಯುಕ್ತರಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸೂಚಿಸಿದ್ದಾರೆ ಎಂದು ವಿಶ್ವನಾಥ್ ತಿಳಿಸಿದರು.
ಇನ್ನೆರಡು ಮೂರು ದಿನಗಳಲ್ಲಿ ಆಯುಕ್ತರು ಎಸ್ಐಟಿಗೆ ವಹಿಸಬಹುದಾದ ಹಗರಣಗಳ ಪಟ್ಟಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ. ಇದನ್ನು ಮುಖ್ಯಮಂತ್ರಿಗಳು ಪರಿಶೀಲಿಸಿ ಎಸ್ಐಟಿ ರಚನೆ ಮತ್ತು ಅದರ ಸ್ವರೂಪದ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಬಿಡಿಎಗೆ ಕಳಂಕ ತರಲು ಹೊರಟಿರುವ ಭ್ರಷ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ, ಮತ್ತೆ ಬಿಡಿಎಯನ್ನು ಸಾರ್ವಜನಿಕ ಸ್ನೇಹಿಯನ್ನಾಗಿ ಮಾಡಲು ಎಲ್ಲಾ ಪ್ರಯತ್ನಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Related posts