ವಿದ್ಯಾರ್ಥಿಗಳಿಗೆ ಆನ್’ಲೈನ್ ಪಾಠ; ಜೂನ್ ವರೆಗೂ ಪರೀಕ್ಷೆ ಅಸಾಧ್ಯ?

ಬೆಂಗಳೂರು: ಕೊರೋನಾ ವೈರಸ್ ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿದ್ದು ಎಲ್ಲೆಲ್ಲೂ ಲಾಕ್ ಡೌನ್ ಅನಿವಾರ್ಯವಾಗಿದೆ. ಈ ಲಾಕ್ ಡೌನ್ ನಿಂದಾಗಿ ರಾಜ್ಯದ ಬಹುತೇಕ ಶಿಕ್ಷಣ ಕೋರ್ಸ್’ಗಳ ಪರೀಕ್ಷೆ ಮುಂದೂಡಲ್ಪಟ್ಟಿದೆ. ಲಾಕ್ ಡೌನ್ ತೆರವಾಗುವ ವರೆಗೆ ಯಾವುದೇ ಶಾಲೆ-ಕಾಲೇಜುಗಳಲ್ಲಿ ಚಟುವಟಿಕೆಗಳು ಅಸಾಧ್ಯ. ಹಾಗಾಗಿ ವಿದ್ಯಾರ್ಥಿಗಳು ಮುಂದೇನು ಎಂದು ಚಿಂತೆಗೀಡಾಗಿದ್ದಾರೆ.

ಈ ನಡುವೆ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಬರುವ ಜೂನ್‌ ವೇಳೆಗೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತಂತೆ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಖಾತೆಯನ್ನು ಹೊಂದಿರುವ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ.

ಪ್ರಸ್ತುತ ಲಾಕ್ ಡೌನ್ ಸ್ಥಿತಿ ಹಿನ್ನೆಲೆಯಲ್ಲಿ ಎದುರಾಗಿರುವ ಸಂಕಷ್ಟ ಕುರಿತು ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿದ ಅಶ್ವತ್ಥನಾರಾಯಣ, ಪರೀಕ್ಷೆ ಕುರಿತು ಪರಿಸ್ಥಿತಿ ಅವಲೋಕಿಸಿದರು. ಲಾಕ್ ಡೌನ್ ಸ್ಥಿತಿಯಿಂದಾಗಿ ಶೈಕ್ಷಣಿಕ ವರ್ಷದ ಪಾಠ ಪ್ರವಚನಗಳು ಪೂರ್ಣಗೊಂಡಿಲ್ಲ. ಹಾಗಾಗಿ ಆನ್‌ಲೈನ್‌ ಮೂಲಕ ಪಾಠ ಪೂರ್ಣಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ಪರೀಕ್ಷೆ ನಡೆಸಬೇಕೇ ಅಥವಾ ತರಗತಿಗಳು ಆರಂಭವಾದ ನಂತರ ತಡವಾಗಿ ಪರೀಕ್ಷೆ ನಡೆಸಬೇಕೇ ಎಂಬ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.

ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಆಯುಕ್ತಾಲಯ ಯೂಟ್ಯೂಬ್‌ನಲ್ಲಿ ಪಾಠ ಮಾಡಿ ಅಪ್‌ ಲೋಡ್‌ ಮಾಡಿವೆ. ಶೀಘ್ರದಲ್ಲೇ ಅದು ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ. ಕಲಿಕೆಗೆ ಪೂರಕವಾದ ಅಂಶಗಳು ಇ-ಕಂಟೆಂಟ್‌ನಲ್ಲಿ ಲಭ್ಯವಿರಲಿದೆ, ಎಂದವರು ತಿಳಿಸಿದರು.

Related posts