ಎಂಜಿನಿಯರಿಂಗ್‌, ಪದವಿ ಶಿಕ್ಷಣ ಸಂಸ್ಥೆಗಳಿಗೆ ಪೂರ್ಣ ಸ್ವಾಯತ್ತತೆ;  ಸರ್ಕಾರ ಭರವಸೆ

ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಹಾಗೂ ಜಾಗತಿಕ ಸ್ಪರ್ಧಾತ್ಮಕತೆಗೆ ತೆರೆದುಕೊಳ್ಳುವ ಉದ್ದಶದಿಂದ ಖಾಸಗಿ ಹಾಗೂ ಸಾರ್ವಜನಿಕ ಸ್ವಾಮ್ಯದ ಎಂಜಿನಿಯರಿಂಗ್‌, ಡಿಪ್ಲೊಮೋ, ಪದವಿ ಶಿಕ್ಷಣ ಸಂಸ್ಥೆಗಳಿಗೆ ಪೂರ್ಣ ಸ್ವಾಯತ್ತತೆ ನೀಡಲು ರಾಜ್ಯ ಸರಕಾರ ಸಿದ್ಧವಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು.

ಮಾಜಿ ಪ್ರಧಾನಮಂತ್ರಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನದ ನಿಮಿತ್ತ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ʼಉತ್ತಮ ಆಡಳಿತ ದಿನʼ (ಗುಡ್‌ ಗವರ್ನೆನ್ಸ್‌ ಡೇ) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಎಲ್ಲ ಸವಾಲುಗಳನ್ನು ಎದುರಿಸಲು ಹಾಗೂ ವೈಯಕ್ತಿಕವಾಗಿಯೂ ಯಾವುದೇ ಸಮಸ್ಯೆಯನ್ನು ಮೆಟ್ಟಿ ನಿಲ್ಲಲು ಶಿಕ್ಷಣವೇ ಏಕೈಕ ರಾಜಮಾರ್ಗ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದರು.

ಜಾಗತಿಕ ಮಟ್ಟದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ, ರಚನಾತ್ಮಕ ಸ್ವಾಯತ್ತತೆ ನೀಡಿ ಅತ್ಯುತ್ತಮ ಫಲಿತಾಂಶವನ್ನು ಪಡೆಯಲಾಗುತ್ತಿದೆ. ಇದೇ ದಾರಿಯಲ್ಲಿ ನಮ್ಮ ಸರಕಾರವೂ ಹೆಜ್ಜೆ ಇಡಲು ಸಿದ್ಧವಿದೆ. ಎಲ್ಲವನ್ನೂ ಸರಕಾರವೇ ತನ್ನ ವಶದಲ್ಲಿಟ್ಟುಕೊಂಡು ಮಾಡಲು ಸಾಧ್ಯವಿಲ್ಲ. ಅಟಲ್‌ ಬಿಹಾರಿ ವಾಜಪೇಯಿ ಅವರ ದೂರದೃಷ್ಟಿ, ಆಶಯ ಮತ್ತು ಆಡಳಿತದಂತೆಯೇ ಸರಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಅದ್ಭುತಗಳನ್ನೇ ಸೃಷ್ಟಿ ಮಾಡಬಹುದು. ಉನ್ನತ ಶಿಕ್ಷಣದಲ್ಲಿ ವಿವಿಧ ಬಗೆಯ ಸಂಸ್ಥೆಗಳಿಗೆ ಸ್ವಾಯತ್ತತೆ ಎಂಬ ಶಕ್ತಿಯನ್ನು ತುಂಬಲು ಸರಕಾರ ಸಿದ್ಧವಿದೆ. ಈ ಹಿನ್ನೆಲೆಯಲ್ಲಿ ಅಟಲ್‌ ಜೀ ಅವರು ನಮಗೆ ಸ್ಫೂರ್ತಿ ಎಂದರು.

ನೂತನವಾಗಿ ಜಾರಿಗೆ ತರಲಾಗುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲೂ ಸ್ವಾಯತ್ತತೆ ಅಂಶವನ್ನು ಪ್ರಮುಖವಾಗಿ ಪ್ರಸ್ತಾಪಿಸಲಾಗಿದೆ ಎಂದ ಉಪ ಮುಖ್ಯಮಂತ್ರಿಗಳು, ಉತ್ತಮ ಶಿಕ್ಷಣ ಸಂಸ್ಥೆಗಳನ್ನು ಕಟ್ಟಲು, ಅತ್ಯುತ್ತಮ ಕಲಿಕೆ-ಬೋಧನೆ ಹಾಗೂ ಸಂಶೋಧನೆಗೆ ಇದರಿಂದ ಅನುಕೂಲವಾಗಲಿದೆ ಎಂದರು.

Related posts