ಆಶಾ ಕಾರ್ಯಕರ್ತೆಯರ ಹೋರಾಟದ ಸಂಚಲನ; ಅಧಿಕಾರಿಗಳಿಗೆ ಆರೋಗ್ಯ ಸಚಿವರ ನಿರ್ದೇಶನ ಹೀಗಿದೆ

ಬೆಂಗಳೂರು: ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ತಿಂಗಳ 10ರೊಳಗೆ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಸಮಸ್ಯೆ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಆರೋಗ್ಯ ಕ್ಷೇತ್ರದಲ್ಲಿ ಅವಿರತ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಕಾಲದಲ್ಲಿ ಗೌರವಧನ ಪಾವತಿಯಾಗದೆ ಬಹುತೇಕ ಮಂದಿ ಪರದಾಡುತ್ತಿದ್ದಾರೆ‌. ಸರ್ಕಾರದ ನಿರ್ಲಕ್ಷ್ಯ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿರುವ ಬಗ್ಗೆ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವ ದಿನೇಶ್ ಗುಂಡೂರಾವ್, ಅವರು ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆರೋಗ್ಯ ಕಾರ್ಯಕರ್ತೆಯರಾಗಿರುವ ಆಶಾಗಳ ಮಾಸಿಕ ಗೌರವಧನವನ್ನು ತಿಂಗಳ 10 ರೊಳಗೆ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವಂತೆ ಸಚಿವರು ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಶಾಗಳ ಮನವಿಗೆ ಸ್ಪಂಧಿಸಿದ ಸಚಿವರು..!

ಇತ್ತೀಚೆಗಷ್ಟೇ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್, ರಾಜ್ಯ ಉಪಾಧ್ಯಕ್ಷರಾದ ರಮಾ ಹಾಗೂ ರಾಜ್ಯ ಕಾರ್ಯದರ್ಶಿ ನಾಗಲಕ್ಷ್ಮಿ ಅವರನ್ನೊಳಗೊಂಡ ನಿಯೋಗ ಬೆಂಗಳೂರಿನಲ್ಲಿ ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿತ್ತು. ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಮತ್ತು ರಾಜ್ಯದ ಗೌರವ ಧನ ಸೇರಿಸಿ ಕನಿಷ್ಠ 15,000 ಮಾಸಿಕ ವೇತನ ನಿಗದಿ ಆಗಬೇಕೆಂದು ಆಶಾ ಕಾರ್ಯಕರ್ತೆಯರ ಸಂಘದ ಪ್ರಮುಖರು ಬೇಡಿಕೆ ಸಲ್ಲಿಸಿದ್ದರು. ವೇತನ ವಿಳಂಬ ಸಹಿತ ಹಲವಾರು ಸಮಸ್ಯೆಗಳ ಬಗ್ಗೆ ಸಚಿವರ ಗಮನಸೆಳೆದಿದ್ದರು. ಈ ಬಗ್ಗೆ ಸದ್ಯದಲ್ಲೇ ಸಭೆ ಕರೆದು ಚರ್ಚಿಸುವುದಾಗಿ ಸಚಿವರು ಭರವಸೆ ನೀಡಿದ್ದರು. 

Related posts