ಕೋಲ್ಕತ್ತಾ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ತೀವ್ರಗೊಂಡು ಅಕ್ಟೋಬರ್ 26ರ ವೇಳೆಗೆ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಈ ಚಂಡಮಾರುತಕ್ಕೆ ‘ಅರ್ನಬ್’ ಎಂದು ಹೆಸರಿಡುವ ಸಾಧ್ಯತೆಯಿದ್ದು, ಇದರ ಪರಿಣಾಮವಾಗಿ ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
ಮುನ್ಸೂಚನೆಯ ಪ್ರಕಾರ, ಚಂಡಮಾರುತವು ಉತ್ತರ ಆಂಧ್ರಪ್ರದೇಶ ಮತ್ತು ದಕ್ಷಿಣ ಒಡಿಶಾ ಕರಾವಳಿಯತ್ತ ಚಲಿಸುವ ಸಾಧ್ಯತೆಯಿದೆ. ಅಕ್ಟೋಬರ್ 27ರಿಂದ 29ರವರೆಗೆ ಕರಾವಳಿ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಭಾರಿ ಮಳೆಯಾಗಬಹುದು. ಪಶ್ಚಿಮ ಬಂಗಾಳದ ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಅಕ್ಟೋಬರ್ 28ರಿಂದ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಬಂಗಾಳದ ಹಲವು ಜಿಲ್ಲೆಗಳಲ್ಲಿ ಗಂಟೆಗೆ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಕೋಲ್ಕತ್ತಾದಲ್ಲೂ ಅಕ್ಟೋಬರ್ 28ರಿಂದ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಚಂಡಮಾರುತದ ಪ್ರಭಾವದಿಂದ ದಕ್ಷಿಣ ಬಂಗಾಳದ ಹಗಲಿನ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಕುಸಿಯಬಹುದು ಎಂದು ಅಂದಾಜಿಸಲಾಗಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ಅಕ್ಟೋಬರ್ 26ರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಐಎಂಡಿ ಎಚ್ಚರಿಕೆ ನೀಡಿದೆ. ಈಶಾನ್ಯ ಮಾನ್ಸೂನ್ನ ಪ್ರಭಾವದಿಂದ ಆಂಧ್ರಪ್ರದೇಶದ ಹಲವು ಭಾಗಗಳಲ್ಲೂ ಮುಂದಿನ ನಾಲ್ಕು ದಿನಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಪ್ರದೇಶಗಳ ಜನರು ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಸ್ಥಳೀಯ ಆಡಳಿತದ ಸೂಚನೆಗಳನ್ನು ಗಮನಿಸುವಂತೆ ಸಲಹೆ ನೀಡಲಾಗಿದೆ.

