ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ KSRTC ನಿರ್ವಾಹಕನ ಅಮಾನತು: ವಜಾಕ್ಕೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಬೆಂಗಳೂರು: ಮಹಿಳಾ ಪ್ರಯಾಣಿಕರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ KSRTC ನಿರ್ವಹನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪ್ರಯಾಣಿಕರ ಜೊತೆ ಅಸಭ್ಯವಾಗಿ ವರ್ತಿಸಿರುವುದಕ್ಕೆ ಅಮಾನತು ಮಾಡಿದರೆ ಸಾಲದು, ಸೇವೆಯಿಂದಲೇ ವಜಾ ಮಾಡಬೇಕಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಪಾದಿಸಿದ್ದಾರೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು KSRTC ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ.

ಬಸ್ಸಿನಲ್ಲಿ ನಿರ್ವಾಹಕನೊಬ್ಬ ಮಹಿಳಾ ಪ್ರಯಾಣಿಕರೊಡನೆ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿವೀಡಿಯೋ ಹರಿದಾಡಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ KSRTC ಆಡಳಿತ ಮಂಡಳಿ, ಆರೋಪಕ್ಕೆ ಗುರಿಯಾಗಿರುವ ಮಂಗಳೂರು ವಿಭಾಗದ KSRTC ನಿರ್ವಹನನ್ನು ಸೇವೆಯಿಂದ ಅಮಾನತುಗೊಳಿಸಿದೆ.

ಈ ನಡುವೆ, ಆರೋಪ ಬಗ್ಗೆ ಕೆಂಡಾಮಂಡಲವಾಗಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ KSRTC ವ್ಯವಸ್ಥಾಪಕ ನಿರ್ದೇಶಕರಿಗೆ ಟಿಪ್ಪಣಿ ರವಾನಿಸಿದ್ದು, ಪ್ರಸಾರವಾದ ವಿಡಿಯೋಗೆ ಸಂಬಂಧಪಟ್ಟಂತೆ, ಮೇಲ್ನೋಟಕ್ಕೆ ಘಟನೆಗೆ ಸಂಬಂಧಪಟ್ಟಂತೆ ಕೂಡಲೇ ವಿಚಾರಣಾ ಪ್ರಕ್ರಿಯೆ ಪ್ರಾರಂಭಿಸಿ, ತ್ವರಿತವಾಗಿ ವಿಚಾರಣೆ ಮುಗಿಸಿ, ಆ ನಿರ್ವಾಹಕನನ್ನು ಸೇವೆಯಿಂದಲೇ ವಜಾ ಮಾಡಲು ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.

ನಿರ್ವಾಹಕನ ಬಗ್ಗೆ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿರ್ವಾಹಕನನ್ನು ಅಮಾನತು ಮಾಡಿರುವುದು ಸರಿಯಷ್ಟೇ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಹೆಣ್ಣು ಮಕ್ಕಳೊಡನೆ ಗೌರವದೊಂದಿಗೆ ನಡೆದುಕೊಳ್ಳುವುದು ನಮ್ಮ ಸಿಬ್ಬಂದಿಗಳ ಆದ್ಯ ಕರ್ತವ್ಯವಾಗಿರಬೇಕು. ಈ ರೀತಿಯ ಅಸಹ್ಯಕರ ನಡವಳಿಕೆ ಅಕ್ಷಮ್ಯ ಅಪರಾಧ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

KSRTC ಬಸ್ಸುಗಳು ಹಾಗೂ ಚಾಲಕ – ನಿರ್ವಾಹಕರ ಬಗ್ಗೆ ಸಾರ್ವಜನಿಕ ಪ್ರಯಾಣಿಕರು ಅತೀವ ನಂಬಿಕೆ ಮತ್ತು ಪ್ರೀತಿ ಹೊಂದಿದ್ದಾರೆ. ಕೆಲವೊಬ್ಬರು ಮಾಡುವ ಈ ರೀತಿಯ ಕೆಲಸಗಳು ಸಂಸ್ಥೆ ಹಾಗೂ ಸಿಬ್ಬಂದಿಗಳ ಗೌರವಕ್ಕೆ ಧಕ್ಕೆ ತರುವಂತಹದು. ಈ ಘಟನೆಗೆ ಸಂಬಂಧಪಟ್ಟಂತೆ ಕೂಡಲೇ ವಿಚಾರಣಾ ಪ್ರಕ್ರಿಯೆ ಪ್ರಾರಂಭಿಸಿ, ತ್ವರಿತವಾಗಿ ವಿಚಾರಣೆ ಮುಗಿಸಿ, ಆ ನಿರ್ವಾಹಕನನ್ನು ಸೇವೆಯಿಂದಲೇ ವಜಾ ಮಾಡಲು ಕ್ರಮಕೈಗೊಳ್ಳುವಂತೆ ಸಚಿವರು ನಿಗಮದ ಎಂಡಿಗೆ ನಿರ್ದೇಶಿಸಿದ್ದಾರೆ.

Related posts