ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ವೊಂದರ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಪ್ರೇಮ್ ಕುಮಾರ್ ಹಾಗೂ ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರೆಲ್ಲರೂ ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರು ಎಂದು ತಿಳಿದುಬಂದಿದೆ. ತುಮಕೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

