ಬೆಂಗಳೂರು: ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ-ಬಿಟಿ) ವಲಯದ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ನಿರಾಕರಿಸಲಾಗುತ್ತಿದೆ ಹಾಗೂ ಸ್ಥಳೀಯ ಕನ್ನಡ ಭಾಷಿಕರನ್ನು ಕಡೆಗಣಿಸಲಾಗುತ್ತಿದೆ ಎಂಬ ದೂರುಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಕನ್ನಡಿಗರ ಹಕ್ಕುಗಳು, ಘನತೆ ಮತ್ತು ಉದ್ಯೋಗಾವಕಾಶಗಳು ಸರ್ಕಾರಕ್ಕೆ ಅತ್ಯಂತ ಮಹತ್ವದ್ದಾಗಿವೆ ಎಂದು ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ. ರಾಜ್ಯದ ಯುವಜನರ ವಿರುದ್ಧ ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡುವುದನ್ನು ಸಹಿಸುವುದಿಲ್ಲ. ಇಂತಹ ಕೃತ್ಯಗಳಲ್ಲಿ ತೊಡಗಿರುವ ಖಾಸಗಿ ಸಂಸ್ಥೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಈ ಸಂಬಂಧ ಬಂದಿರುವ ದೂರುಗಳನ್ನು ನೇರವಾಗಿ ಪರಿಶೀಲಿಸಿ, ಉದ್ಯೋಗಾಕಾಂಕ್ಷಿಗಳ ಆತಂಕಗಳನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದೆ.

ಇದೇ ವೇಳೆ, ಯಾವುದೇ ಸಂಘಟನೆಗಳು ನೇರವಾಗಿ ಐಟಿ-ಬಿಟಿ ಕಂಪನಿಗಳಿಗೆ ಭೇಟಿ ನೀಡುವುದು ಅಥವಾ ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಕಚೇರಿ ಮನವಿ ಮಾಡಿದೆ. ಇಂತಹ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಮತ್ತು ಕಾನೂನಿನ ಚೌಕಟ್ಟಿನೊಳಗೆ ಬಗೆಹರಿಸಿಕೊಳ್ಳಬೇಕು ಎಂದು ಸೂಚಿಸಿದೆ.
ಕನ್ನಡಿಗರ ಹಿತಾಸಕ್ತಿಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದ್ದು, ಸ್ಥಳೀಯ ಯುವಜನರ ಹಕ್ಕುಗಳು ಹಾಗೂ ಉದ್ಯೋಗಾವಕಾಶಗಳನ್ನು ಖಚಿತಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ಪುನರುಚ್ಚರಿಸಲಾಗಿದೆ.

