ಮಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಶನಿವಾರದಿಂದ ಮಳೆಯ ಅಬ್ಬರ ಮತ್ತಷ್ಟು ತೀವ್ರವಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಭಾನುವಾರವೂ ಧಾರಾಕಾರವಾಗಿ ಮಳೆಯಾಗುತ್ತಿದೆ. ಹೀಗಾಗಿ ಜನಜೀವನದ ಮೇಲೆ ಪರಿಣಾಮ ಬೀರಿದ್ದು, ಕೆಲವಡೆ ಅವಘಡಗಳು ಸಂಭವಿಸಿವೆ.
ಮಳೆ ಸಹಿತ ಬಿರುಗಾಳಿಯಿಂದಾಗಿ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ರಸ್ತೆಯ ಮೂರು ಕಡೆಗಳಲ್ಲಿ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಝರಿ ಜಲಪಾತಕ್ಕೆ ಸಂಪರ್ಕವಿರುವ ರಸ್ತೆ ಸಂಪೂರ್ಣವಾಗಿ ಬಂದ್ ಆಗಿದೆ.
ಇದೇ ವೇಳೆ ಶೃಂಗೇರಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ್ದು, ಈ ಮಾರ್ಗದಲ್ಲೂ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಸಂಬಂಧಪಟ್ಟ ಇಲಾಖೆಗಳು ಮರಗಳನ್ನು ತೆರವುಗೊಳಿಸಲು ಮತ್ತು ಭೂಕುಸಿತ ಸ್ಥಳದಲ್ಲಿ ರಸ್ತೆ ಸಂಚಾರ ಪುನರ್‌ಸ್ಥಾಪನೆಗಾಗಿ ಕ್ರಮ ಕೈಗೊಂಡಿವೆ.