ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಪ್ರಧಾನ ಮಂತ್ರಿ ಕಚೇರಿ ಸಾಮಾಜಿಕ ಜಾಲತಾಣ X ಮೂಲಕ ಮಾಹಿತಿ ಹಂಚಿಕೊಂಡಿದ್ದು, “ಕರ್ನೂಲ್ ಅಪಘಾತವು ಅತ್ಯಂತ ದುಃಖದ ಸಂಗತಿ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ” ಎಂದು ಪ್ರಧಾನಿ ತಿಳಿಸಿದ್ದಾರೆ.

ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ₹2 ಲಕ್ಷ ಪರಿಹಾರ ನೀಡಲಾಗುತ್ತದೆ. ಗಾಯಾಳುಗಳಿಗೆ ₹50,000 ಪರಿಹಾರ ನೀಡಲಾಗುವುದು ಎಂದು PMO ಸ್ಪಷ್ಟಪಡಿಸಿದೆ.

ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬೊಲೆರೊ ವಾಹನವು ರೆಡಿ-ಮಿಕ್ಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಒಟ್ಟು ಎಂಟು ಮಂದಿ ಮೃತಪಟ್ಟಿದ್ದಾರೆ. ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೂ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ 10ರಿಂದ 12 ಮಂದಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಎಮ್ಮಿಗನೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಕರ್ನಾಟಕದ ಯಾತ್ರಿಕರಾಗಿದ್ದು, ಮಂತ್ರಾಲಯ ದೇವಸ್ಥಾನ ದರ್ಶನಕ್ಕೆ ತೆರಳಿ ವಾಪಸ್ಸಾಗುವ ವೇಳೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related posts