ಕಾಂಗ್ರೆಸ್ ಸೇರಿದ ನಾಯಕರಿಗೆ ರಾಜಕೀಯವಾಗಿ ಅನ್ಯಾಯವಾಗಲು ಬಿಡಲ್ಲ; ಸಿಎಂ 

ಬೆಂಗಳೂರು: ಕಾಂಗ್ರೆಸ್ ಸೇರಿದ ನಾಯಕರಿಗೆ ರಾಜಕೀಯವಾಗಿ ಅನ್ಯಾವಾಗಲು ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಮತ್ತು ಶ್ರೀನಿವಾಸ್ ಸಹಿತ ಪ್ರಮುಖ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿಯಲ್ಲಿದ್ದರು. ಈಗ ಕಾಂಗ್ರೆಸ್ ಗೆ ಬಂದಿದ್ದಾರೆ. ಇವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ ಎಂದರು.

ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ನಮ್ಮ ಕಾಂಗ್ರೆಸ್ . ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಧ್ವನಿಯಾಗಿ ಎ.ಕೃಷ್ಣಪ್ಪ, ಪೂರ್ಣಿಮಾ ಮತ್ತು ಶ್ರೀನಿವಾಸ್ ಮೊದಲಿನಿಂದಲೂ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಎಲ್ಲಾ ಜಾತಿಯ ಬಡವರು ಮತ್ತು ಶೂದ್ರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡು ರಾಜಕೀಯ ನಿಲುವು ತೆಗೆದುಕೊಳ್ಳಬೇಕು ಎಂದರು.

ಪೂರ್ಣಿಮಾ, ಶ್ರೀನಿವಾಸ್ ಮತ್ತು ಇವರ ಬೆಂಬಲಿಗರಿಗೆ ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯ ಇಲ್ಲ ಎನ್ನುವುದು ಸ್ಪಷ್ಟವಾಗಿ ಮನದಟ್ಟಾಗಿದೆ. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯದ ಪರವಾಗಿ ನಿಲುವು ಇಟ್ಟುಕೊಂಡಿರುವವರಿಗೆ ಬಹಳ ಕಷ್ಟ ಎನ್ನುವುದು ಇವರನ್ನು ನೋಡಿದಾಗ ಸ್ಪಷ್ಟವಾಗಿದೆ. ಅದಕ್ಕೇ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಹಿಂದುಳಿದ ಸಮುದಾಯಗಳು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದ ಸಿಎಂ ಸಿದ್ದರಾಮಯ್ಯ, ಸುಳ್ಳು ಬಿಜೆಪಿಯ ಮನೆ ದೇವರು. ಸುಳ್ಳುಗಳ ಮೂಲಕ ಜನರನ್ನು ಯಾಮಾರಿಸಿ, ದಿಕ್ಕು ತಪ್ಪಿಸಿ, ಹಾದಿ ತಪ್ಪಿಸಿ ಕೆಟ್ಟ ರಾಜಕಾರಣ ಮಾಡುತ್ತದೆ. ಅಧಿಕಾರಿ ಇದ್ದಾಗಲೂ ಸುಳ್ಳು, ಅಧಿಕಾರ ಇಲ್ಲದಿದ್ದಾಗಲೂ ಸುಳ್ಳುಗಳ ಮೇಲೆ ಅವಲಂಬನೆಯಾಗಿರುತ್ತದೆ. ನಿಮ್ಮ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ನಿಮ್ಮನ್ನೇ ಯಾಮಾರಿಸುವವರನ್ನು ಈ ಕ್ಷಣದಿಂದಲೇ ತಿರಸ್ಕರಿಸಿ ಎಂದರು.

Related posts