ಬೆಳಗಾವಿ: ರೈತರು ಯಂತ್ರೋಪಕರಣಗಳನ್ನು ಪರಿಣಾಮಕಾರಿಯಾಗಿ ಬಳಸುವ ಮೂಲಕ ಹೊರ ರಾಜ್ಯಗಳಿಂದ ಬರುವ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ತಪ್ಪಿಸಬಹುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಪಾದಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದ ಸಚಿವರು, ಹಾರ್ವೆಸ್ಟರ್ ಹಬ್ ಕಟಾವ್ ಯಂತ್ರ ಬಳಕೆ ಮಾಡುವುದರಿಂದ 20 ರಿಂದ 30 ಟನ್ ಇಳುವರಿ ಹೆಚ್ಚಿಸಬಹುದು ಎಂದು ತಿಳಿಸಿದರು.
ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದು ಕೃಷಿ ಸಚಿವರು ಹೇಳಿದರು.
ಬೆಳಗಾವಿ ವಿಭಾಗ ಮಟ್ಟದಲ್ಲಿ ಸುಮಾರು 2150 ಫಲಾನುಭವಿಗಳಿಗೆ ವಿವಿಧ ಯಂತ್ರೋಪರಣಗಳ ಸವಲತ್ತುಗಳನ್ನು ಕೃಷಿ ಇಲಾಖೆ ಒದಗಿಸಿದ್ದು, ಈ ಸೌಲಭ್ಯಗಳನ್ನು ರೈತರು ಪರಿಣಾಮಕಾರಿಯಾಗಿ ಬಳಕೆ ಮಾಡೋ ಮೂಲಕ ಆಹಾರ ಉತ್ಪಾದನೆ ಹೆಚ್ಚಿಸಬೇಕು ಎಂದು ಹೇಳಿದರು.
ಇನ್ನೂ ಪ್ರಧಾನಿ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು ನೂತನ ತಂತ್ರಜ್ಞಾನದ ಮೂಲಕ ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ದೇಶದ ಇತರೆ ರಾಜ್ಯಗಳಗೆ ನಾವು ಮಾದರಿಯಾಗಿದ್ದೇವೆ ಎಂದು ಸಚಿವರು ತಿಳಿಸಿದರು.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫಲಾನುಭವಿಗಳಿಗೆ ಹಾರ್ವೆಸ್ಟರ್ ಹಬ್ ಯಂತ್ರದ ಕೀಲಿ ನೀಡಿದರು. ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆ ಹಾಗು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಮಿ ಹೆಬಾಳ್ಕರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಶಾಸಕ ಕೊನರೆಡ್ಡಿ, ರಾಜೀವ್ ಸೇಠ್, ಬಾಬಾ ಸಾಹೇಬ್ ಪಾಟೀಲ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು..