ಬೆಂಗಳೂರು: ಮಾಲೂರು ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹಾಗಾಗಿ ಶಾಸಕ ಸ್ಥಾನವನ್ನು ಉಳಿಸಿಕೊಳ್ಳುವ ನಂಜೇಗೌಡರ ಪ್ರಯತ್ನ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಮರುಮತ ಎಣಿಕೆ ಮಾಡಲು ಮಹತ್ವದ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್, ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಬಹಿರಂಗ ಪಡಿಸದೇ, ಮುಚ್ಚಿದ ಲಕೋಟೆಯಲ್ಲಿ ಕೋರ್ಟ್ಗೆ ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ನಿರ್ದೇಶನ ನೀಡಿದೆ.
2023 ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದ ಮತ ಎಣಿಕೆಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆಪ್ಟೆಂಬರ್ 16 ರಂದು ಕರ್ನಾಟಕ ಹೈಕೋರ್ಟ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆವೈ ನಂಜೇಗೌಡ ಆಯ್ಕೆಯನ್ನು ರದ್ದುಪಡಿಸಿತ್ತು. ಹೈಕೋರ್ಟ್ ಶಾಸಕ ಸ್ಥಾನ ರದ್ದು ಮಾಡಿ ನೀಡಿರುವ ತೀರ್ಪನ್ನು ಪ್ರಶ್ನಿಸಿ ನಂಜೇಗೌಡರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಜೊಯಮಲ್ಯ ಬಾಗ್ಚಿ ಅವರಿದ್ದ ಪೀಠ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
