ನೀಟ್‌ ಪರೀಕ್ಷೆ ರದ್ದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣ: ಡಾ. ಶರಣಪ್ರಕಾಶ ಪಾಟೀಲ್‌

ಬೆಂಗಳೂರು: ನೀಟ್‌ ಪರೀಕ್ಷೆ ರದ್ದು ಮಾಡಿರುವುದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 3ರಂದು ನಡೆದಿದ್ದ ನೀಟ್‌ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಪಡಿಸಿರುವುದನ್ನು ತೀವ್ರವಾಗಿ ಖಂಡಿಸಿದರು.

“ಕಳೆದ ನಾಲ್ಕೈದು ವರ್ಷಗಳಿಂದ ನೀಟ್‌ನಲ್ಲಿ ಒಂದಲ್ಲ ಒಂದು ಅಕ್ರಮ, ಗೊಂದಲಗಳು ನಡೆಯುತ್ತಲೇ ಇವೆ. ಇದಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ನೇರ ಹೊಣೆ” ಎಂದು ಕಿಡಿಕಾರಿದರು.

ಈ ಕುರಿತು ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವಾಲಯಕ್ಕೆ ಈಗಾಗಲೇ ಹಲವು ಬಾರಿ ಮನವರಿಕೆ ಮಾಡಿಕೊಟ್ಟಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಪರಿಣಾಮ ಮತ್ತೊಮ್ಮೆ ಭಾರೀ ಪ್ರಮಾದ ಸಂಭವಿಸಿದೆ ಎಂದು ಹೇಳಿದರು.

ತಪ್ಪಿತಸ್ಥರನ್ನು ಕಾನೂನಿನ ಮುಂದೆ ನಿಲ್ಲಿಸಿ ಕಠಿಣ ಶಿಕ್ಷೆ ನೀಡಬೇಕು. ಇದು ಕೇಂದ್ರ ಸರ್ಕಾರದ ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

ಪರೀಕ್ಷೆಯನ್ನು ಮರುನಡೆಸುವುದರಿಂದ ಪ್ರಾಮಾಣಿಕವಾಗಿ ಓದಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ಹೆಚ್ಚುವರಿ ಮಾನಸಿಕ ಒತ್ತಡ ಉಂಟಾಗಲಿದೆ ಎಂದು ಸಚಿವರು ಆತಂಕ ವ್ಯಕ್ತಪಡಿಸಿದರು.

“ಪ್ರತಿ ವರ್ಷ ಇಂತಹ ಅಕ್ರಮಗಳು ನಡೆಯುತ್ತಿದ್ದರೂ ಕೇಂದ್ರ ಸರ್ಕಾರಕ್ಕೆ ಅದನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಹಿಂದೆ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಯುತ್ತಿದೆ” ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ದೊಡ್ಡ ದೊಡ್ಡ ಭಾಷಣ ಮಾಡುವುದಲ್ಲ, ಇಂತಹ ಸಂಕಷ್ಟ ಸಂದರ್ಭಗಳಲ್ಲಿ ವಿದ್ಯಾರ್ಥಿಗಳಿಗೆ ಪರಿಹಾರ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.

“‘ಪರೀಕ್ಷಾ ಪೇ ಚರ್ಚಾ’ ಮಾಡುವವರು ಮೊದಲು ಪರೀಕ್ಷಾ ವ್ಯವಸ್ಥೆಯಲ್ಲಿನ ಗೊಂದಲಗಳನ್ನು ಸರಿಪಡಿಸಲಿ” ಎಂದು ವ್ಯಂಗ್ಯವಾಡಿದರು.

ಕರ್ನಾಟಕದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಯಶಸ್ವಿಯಾಗಿ ನಡೆಸಲಾಗುತ್ತಿದ್ದು, ರಾಜ್ಯದ ಪರೀಕ್ಷಾ ಮಾದರಿ ದೇಶಕ್ಕೇ ಮಾದರಿಯಾಗಿದೆ ಎಂದು ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.

ಇದೇ ವೇಳೆ, ರಾಜಸ್ಥಾನ ಹಾಗೂ ಹರಿಯಾಣದ ಕೆಲ ಕೋಚಿಂಗ್‌ ಸೆಂಟರ್‌ಗಳು ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ತಮ್ಮ ಪ್ರಭಾವ ಹೆಚ್ಚಿಸಿಕೊಳ್ಳುತ್ತಿವೆ ಎಂದು ಆರೋಪಿಸಿದ ಅವರು, ಇಂತಹ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

Related posts