ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಮಾಡಬೇಡಿ, ದೂರು ನೀಡಿ: ಸಿಎಂ ಕರೆ

ಮೈಸೂರು: ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು, ಬದಲಾಗಿ ದೂರು ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಬಿಐ ನಿಯಮಾವಳಿ ಉಲ್ಲಂಘಿಸುವ, ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದೆ ಎಂದರು. ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ವಿನಂತಿಸುತ್ತೇನೆ ಎಂದರು.

ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ ತೊಂದರೆ ನಮ್ಮ ಗಮನದಲ್ಲಿದೆ. ಜನರು ಸಾಲ ಲಭ್ಯವಾಗುವ ಕಡೆ ಸಾಲ ಪಡೆಯುತ್ತಿದ್ದಾರೆ. ಖಾಸಗಿ ಹಣಕಾಸು ಸಂಸ್ಥೆ, ಲೇವಾದೇವಿಗಾರರು ನೀಡುವ ಸಾಲದ ಮೇಲೆ ಹೆಚ್ಚಿನ ಬಡ್ಡಿ ದರವನ್ನು ಹಾಕುವುದಲ್ಲದೇ, ಗೂಂಡಾಗಳ ಮೂಲಕ ಜನರನ್ನು ಹೆದರಿಸಿ, ಅಮಾನವೀಯ ರೀತಿಯಲ್ಲಿ ಸಾಲ ವಸೂಲಾತಿಯಲ್ಲಿ ತೊಡಗಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಾರ್ಷಿಕವಾಗಿ ಶೇ. 28 ರಿಂದ 30 ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ. ಇದರಿಂದ ಸಾಲ ಪಡೆದ ಜನರು ಬೇಸತ್ತು, ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ಗಮನಿಸಲಾಗಿದೆ. ಮೈಕ್ರೋ ಫೈನಾನ್ಸ್ ವ್ಯವಸ್ಥೆಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ರಿಸರ್ವ್ ಬ್ಯಾಂಕ್ ನ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಮೈಕ್ರೋ ಫೈನಾನ್ಸ್ ನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸದ್ಯದಲ್ಲಿಯೇ ಸುಗ್ರೀವಾಜ್ಞೆಯನ್ನು ಹೊರಡಿಸಲಿದ್ದು, ಕಿರುಕುಳ ನೀಡುತ್ತಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದವರು ತಿಳಿಸಿದ್ದಾರೆ.

Related posts