ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾನುವಾರ ಸಾಧಾರಣ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ತಲಾ ಎರಡು ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಐದು ಜಿಲ್ಲೆಗಳಲ್ಲಿ ವರುಣನ ಸಿಂಚನದ ನಿರೀಕ್ಷೆ ವ್ಯಕ್ತವಾಗಿದೆ. ಅದನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಅನೇಕ ಕಡೆಗಳಲ್ಲಿ ತೀವ್ರ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದರೆ, ಬೆಂಗಳೂರು ನಗರದಲ್ಲಿ ಮಳೆಯ ಸಾಧ್ಯತೆಯಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ಸಂಭವವಿದೆ. ಉತ್ತರ ಒಳನಾಡಿನ ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯ ನಿರೀಕ್ಷೆ ಇದೆ.

