ರಾಜ್ಯದಲ್ಲಿ ಮಳೆಯ ಆರ್ಭಟ: ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಇಂದು ರಜೆ

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಕಳೆದ ನಾಲ್ಕೈದು ದಿನಗಳಿಂದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಹಾಗೂ ಬಿರುಗಾಳಿ ಮುಂದುವರಿದಿದೆ. ಹಲವು ಕಡೆ ಮರಗಳು ಉರುಳಿದ್ದು, ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಭೀತಿಯೂ ಎದುರಾಗಿದೆ.

ಶಿವಮೊಗ್ಗ ಜಿಲ್ಲೆ: ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕುಗಳ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆ: ಮೂಡಿಗೆರೆ, ಕೊಪ್ಪ ಹಾಗೂ ಎನ್.ಆರ್.ಪುರ ತಾಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆ: ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಹಾಸನ ಜಿಲ್ಲೆ: ಸಕಲೇಶಪುರ ತಾಲೂಕಿನ ಅಂಗನವಾಡಿ, ಶಾಲೆಗಳು ಹಾಗೂ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಬೆಳಗಾವಿ ಜಿಲ್ಲೆ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಹಾಗೂ ಖಾನಾಪುರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯ ಪ್ರಯಾಣ ತಪ್ಪಿಸುವಂತೆ ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Related posts