‘ಗೃಹಲಕ್ಷ್ಮಿ’: 1 ಕೋಟಿ 17 ಲಕ್ಷ ಯಜಮಾನಿಯರಿಂದ ನೋಂದಣಿ

ಬೆಂಗಳೂರು: ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಗೃಹಲಕ್ಷ್ಮೀ ಯೋಜನೆಯು ದೇಶದಲ್ಲಿ, ಅಥವಾ ವಿಶ್ವದಲ್ಲಿ ಜಾರಿಯಾದ ಅತಿ ವಿಶಿಷ್ಟ ಹಾಗೂ ಜನಪ್ರಿಯ ಯೋಜನೆಯಾಗಿದೆ. ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ಒದಗಿಸಿರುವ ಅವರು, ಗೃಹಲಕ್ಷ್ಮಿ ಯೋಜನೆಗಾಗಿ ಹೆಸರು ನೋಂದಾಯಿಸಿರುವವರ ಪೈಕಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ. ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಸುಮಾರು 2,100 ಕೋಟಿ ರೂ.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದುವರೆಗೆ ಸುಮಾರು 6 ಸಾವಿರ ಕೋಟಿ ರೂಪಾಯಿ ಜಮಾ ಆಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಮಾಡಿದ ವಾಗ್ದಾನದಂತೆ ದೇವಿಗೆ ಹಣ ಸಲ್ಲಿಸುತ್ತಿದ್ದೇವೆ. ಮುಂದಿನ ಐದು ವರ್ಷ ಕೂಡ ನಿರಂತರವಾಗಿ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಲಿವೆ. ಮಾತ್ರವಲ್ಲ 2028 ರ ವಿಧಾನಸಭೆ ಚುನಾವಣೆಯಲ್ಲೂ ನಾವು ಮತ್ತೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಪುನಃ, ಪುನಃ ಮುಂದುವರಿಸಲಿದ್ದೇವೆ. ಯೋಜನೆ 3 ತಿಂಗಳಿಗೆ ನಿಲ್ಲುತ್ತದೆ, 6 ತಿಂಗಳಿಗೆ ಸ್ಥಗಿತವಾಗುತ್ತದೆ. ಲೋಕಸಭಾ ಚುನಾವಣೆಯ ನಂತರ ಮುಕ್ತಾಯವಾಗುತ್ತದೆ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಅವುಗಳಿಗೆ ಕಿವಿಗೊಡಬೇಡಿ. ಕೇವಲ ಈ ಐದು ವರ್ಷವಲ್ಲ,ಮುಂದಿನ ಐದು ವರ್ಷವೂ ನಾವೇ ಅಧಿಕಾರದಲ್ಲಿರುತ್ತೇವೆ. ಮತ್ತೆ ಈ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

Related posts