ಬೆಂಗಳೂರು: ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ತಾಂತ್ರಿಕ ಸಲಹಾ ಸಮಿತಿ ಜತೆ ಚರ್ಚಿಸಿದ ಬಳಿಕ ನೈಟ್ ಕರ್ಫ್ಯೂ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಹಬ್ಬದ ಸಮಾರಂಭ, ಹೊಸ ವರ್ಷದ ಸಮಾರಂಭ, ಆಚರಣೆ ಎಂದು ಅನವಶ್ಯಕವಾಗಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದು, ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ತುರ್ತು ಸೇವೆಗಳು ಹೇಗಿರಬೇಕು, ಯಾವೆಲ್ಲ ಚಟುವಟಿಕೆಗಳಿಗೆ ಅವಕಾಶ ನೀಡಲಾಗುತ್ತದೆ ಎಂಬುದರ ಬಗ್ಗೆ ಮಾರ್ಗಸೂಚಿಯಲ್ಲಿ ವಿವರವಾಗಿ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.