ಬೆಂಗಳೂರು: ದೇವನಹಳ್ಳಿಯಲ್ಲಿ ಮಾರ್ಚ್ 3 ರಂದು ನಡೆಯಲಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಚಾಲನೆ ನೀಡಲಿದ್ದು, ಕಾರ್ಯಕ್ರಮಕ್ಕೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿದೆ. ಇದರ ಮೂಲಕ ಜನರಿಗೆ ಬಿಜೆಪಿಯ ಸಾಧನೆಗಳನ್ನು ತಿಳಿಸಲಾಗುತ್ತದೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ದೇವನಹಳ್ಳಿಯಲ್ಲಿ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಸಚಿವರು, ಶಾಸಕರು ಭಾಗವವಹಿಸಲಿದ್ದಾರೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ 30 ಸಾವಿರಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆ ಇದೆ. ಇನ್ನೂ ಹೆಚ್ಚಿನ ಜನರು ಬರುವ ನಿರೀಕ್ಷೆ ಇದ್ದರೂ, ಕಡಿಮೆ ಜನರು ಬರಲು ಕೋರಲಾಗಿದೆ. ರೋಡ್ ಶೋ ಕೂಡ ನಡೆಯಲಿದೆ ಎಂದರು.
ಎಲ್ಲಾ ಕಡೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ, ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಜನರು ಪಕ್ಷವನ್ನು ಭರವಸೆಯಿಂದ ನೋಡುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕ, ಪ್ರವಾಹ ಮೊದಲಾದ ಸವಾಲುಗಳಿದ್ದರೂ ಬಿಜೆಪಿ ಉತ್ತಮವಾಗಿ ಆಡಳಿತ ನಿರ್ವಹಣೆ ಮಾಡಿದೆ. ದೇಶದ ಆರ್ಥಿಕ ಪ್ರಗತಿ ಶೇ.7 ಇದ್ದರೆ, ಕರ್ನಾಟಕದ ಆರ್ಥಿಕ ಪ್ರಗತಿ ಶೇ.7.9 ಇದೆ. ಆದ್ದರಿಂದ ಜನರು ಪಕ್ಷದ ಮೇಲೆ ವಿಶ್ವಾಸವಿಟ್ಟಿದ್ದು, ಅಭಿವೃದ್ಧಿ ಕಾರ್ಯ ಬಿಜೆಪಿಯಿಂದ ಸಾಧ್ಯ ಎಂದು ಜನರು ಹೇಳುತ್ತಿದ್ದಾರೆ ಎಂದರು.
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರು ಬಸವಕಲ್ಯಾಣದಿಂದ ನೇರವಾಗಿ ಇಲ್ಲಿಗೆ ಬರುತ್ತಾರೆ. ಆವತಿ ಗ್ರಾಮಕ್ಕೆ ಭೇಟಿ ನೀಡಿ, ರಣಭೈರೇಗೌಡರ ಪ್ರತಿಮೆ ಬಳಿ ತೆರಳಿ ಪುಷ್ಪ ನಮನ ಸಲ್ಲಿಸಲಿದ್ದಾರೆ. ಚನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾರೆ. ಸರ್ಕಾರದ ಸಾಧನೆ ಹಾಗೂ ಭವಿಷ್ಯದ ಗುರಿಗಳ ಬಗ್ಗೆ ತಿಳಿಸಲಾಗುತ್ತದೆ. ಡಬಲ್ ಎಂಜಿನ್ ಸರ್ಕಾರದಿಂದ ರಾಜ್ಯ ಜನರಿಗೆ ಯಾವ ಲಾಭ, ಪ್ರಗತಿಯಾಗಿದೆ ಎಂದು ಹೇಳಲಾಗುತ್ತದೆ. ಮುಂದೆ ರಾಜ್ಯವನ್ನು ಹೇಗೆ ಕಟ್ಟಬೇಕು ಎಂಬ ಬಗ್ಗೆಯೂ ಕೇಂದ್ರ ಸಚಿವರು, ಮುಖ್ಯಮಂತ್ರಿಯವರು ಮಾತನಾಡಲಿದ್ದಾರೆ. ದೇವನಹಳ್ಳಿಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ನಾಲ್ಕನೇ ತಂಡದ ಯಾತ್ರೆಗೆ ಚಾಲನೆ ದೊರೆಯಲಿದೆ ಎಂದರು.
ಇಲ್ಲಿಗೆ ಬರುವವರಿಗೆ ಸಾರಿಗೆ, ಆಹಾರ ವ್ಯವಸ್ಥೆ ಮಾಡಲಾಗಿದೆ.18 ಸಾವಿರಕ್ಕೂ ಅಧಿಕ ಆಸನಗಳ ವ್ಯವಸ್ಥೆ ಮಾಡಲಾಗಿದೆ.ಬಿಜೆಪಿ ಕಾರ್ಯಕರ್ತರು, ವಿವಿಧ ಪ್ರಕೋಷ್ಠ, ಮೋರ್ಚಾಗಳ ಪ್ರಮುಖರು ಹುರುಪಿನಿಂದ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ಕ್ಷೇತ್ರಗಳನ್ನೂ ಗೆಲ್ಲುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡುತ್ತಿದ್ದಾರೆ ಎಂದರು.
10 ಜಿಲ್ಲೆಗಳ 56 ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ನಡೆಯಲಿದೆ. ದಾವಣಗೆರೆಯಲ್ಲಿ ಕೊನೆಯ ಬೃಹತ್ ಸಮಾವೇಶ ನಡೆಯಲಿದೆ. ಇದು ಐತಿಹಾಸಿಕ ಸಮಾವೇಶವಾಗಲಿದೆ. ಇದು ವಿಜಯದ ಸಂಕೇತ ಆಗಲಿದೆ ಎಂದರು.