ಶಿಕ್ಷಣ, ಆರೋಗ್ಯ, ಮೂಲಸೌಕರ್ಯಕ್ಕೆ ಒತ್ತು: ಎಸ್.ಟಿ.ಸೋಮಶೇಖರ್

ಬೆಂಗಳೂರು: ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಲಾಗಿದೆ. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹತ್ತಾರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಜೊತೆಗೆ ಆರೋಗ್ಯ, ಶಿಕ್ಷಣಕ್ಕೂ ಒತ್ತು ನೀಡಲಾಗಿದೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಚನ್ನೇನಹಳ್ಳಿ, ತಾವರೆಕೆರೆ, ಚೋಳನಾಯಕನಹಳ್ಳಿ, ಅಜ್ಜನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ಅಂಗನವಾಡಿ ಕೇಂದ್ರಗಳು, ಶಾಲಾ ಕಟ್ಟಡಗಳ ನಿರ್ಮಾಣ ಮಾಡುವ ಮೂಲಕ ಬಡಮಕ್ಕಳಿಗೆ ಉಚಿತ ಶಿಕ್ಷಣ ಕಲ್ಪಿಸಲಾಗಿದೆ. ಕೆಂಗೇರಿ, ಕೆ.ಗೊಲ್ಲಹಳ್ಳಿಯಲ್ಲಿ ಪದವಿಪೂರ್ವ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಆರಂಭಿಸಲಾಗುತ್ತಿದೆ. ಕ್ಷೇತ್ರದ ಶಾಲಾ ಕಟ್ಟಡಗಳನ್ನು ದುರಸ್ತಿ ಮಾಡಲಾಗಿದೆ. ಸರ್ವರಿಗೂ ಶಿಕ್ಷಣ, ಸರ್ವರಿಗೂ ಸೂರು ಎಂಬ ಘೋಷವಾಕ್ಯದೊಂದಿಗೆ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇನೆ ಎಂದರು.

ಕ್ಷೇತ್ರದ ಜನತೆಯ ಆರೋಗ್ಯದ ಹಿತಕಾಪಾಡಲು ಪ್ರಾಥಮಿಕ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಡಯಾಲಿಸಿಸ್ ಸೆಂಟರ್, ಹೆರಿಗೆ ಆಸ್ಪತ್ರೆಗಳನ್ನು ನಿರ್ಮಿಸುವ ಮೂಲಕ ಕಡಿಮೆ ದರದಲ್ಲಿ ಉತ್ತಮ ಆರೋಗ್ಯ ಸೇವೆ ನೀಡಲು ಕ್ರಮವಹಿಸಲಾಗಿದೆ. ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ಮಹಿಳಾ ಸಬಲೀಕರಣಕ್ಕೂ ಒತ್ತು ನೀಡಲಾಗಿದೆ. ಮಹಿಳೆಯರು ಆರ್ಥಿಕವಾಗಿ ಸದೃಢರಾಗಲು ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಸಂಘಗಳ ನೋಂದಣಿಗೆ ಅಲೆದಾಡುವುದನ್ನು ತಪ್ಪಿಸಲು ಶಾಸಕರ ಕಚೇರಿಯು ವತಿಯಿಂದ ಉಚಿತವಾಗಿ ನೋಂದಣಿ ಮಾಡಿಸಿ ಸಾಲಸೌಲಭ್ಯ ಕಲ್ಪಿಸಲಾಗಿದೆ. ಗ್ರಾಮ ಪಂಚಾಯತಿಗಳು, ಹಾಲು ಉತ್ಪಾದಕರ ಸಹಕಾರ ಸಂಘ, ಕೃಷಿ ಪತ್ತಿನ ಸಹಕಾರ ಸಂಘಗಳ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅನುದಾನ ಕಲ್ಪಿಸಲಾಗಿದೆ. ಇದರ ಜೊತೆಗೆ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರ ಕಾಮಗಾರಿ ಕೈಗೊಳ್ಳಲಾಗುತ್ತಿದೆ. 110 ಹಳ್ಳಿ ವ್ಯಾಪ್ತಿಯ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮವಹಿಸಲಾಗಿದೆ. ತಿಪ್ಪಗೊಂಡನಹಳ್ಳಿ, ಮಂಚನಬೆಲೆ ಜಲಾಶಯದಿಂದ ಕುಡಿಯುವ ನೀರು ಪೂರೈಸುವ ಯೋಜನೆ ರೂಪಿಸಲಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಮನೆಮನೆ ನಳನೀರು ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದರು.

ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ಮತ್ತು ಕೋವಿಡ್ ಸಮಯದಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇನೆ. ಎಲ್ಲೆಡೆ ಉತ್ತಮ ಸ್ಪಂದನೆ ಸಿಕ್ಕಿದ್ದು ಗೆಲುವು ನನ್ನದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Related posts