ಬೆಂಗಳೂರು: ತಾವು ಕಾಂಗ್ರೆಸ್ ಸೇರುವ ಸಾಧ್ಯತೆ ಕುರಿತ ಸುದ್ದಿಯನ್ನು ಮಾಜಿ ಸಚಿವ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ತಳ್ಳಿಹಾಕಿದ್ದಾರೆ. ಬಿಜೆಪಿ ಸಿದ್ಧಾಂತ, ನಾಯಕರನ್ನು ನಂಬಿಯೇ ಪಕ್ಷ ಸೇರ್ಪಡೆಯಾಗಿದ್ದೇನೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಮೇಯವೇ ಇಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.
ತಾವು ಬಿಜೆಪಿ ತ್ಯಜಿಸುವ ಸೂಡಿ ಕುರಿತು ಪ್ರತಿಕ್ರಿಯಿಸುವ ಗೋಪಾಲಯ್ಯ ಅವರು ನಾನು ಕನಸಿನಲ್ಲೂ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಯೋಚನೆಯಾಗಿಲ್ಲ. ಮಾಧ್ಯಮಗಳಲ್ಲಿ ನನ್ನ ಬಗ್ಗೆ ಇಂತಹ ಹುಸಿ ಸುದ್ದಿ ಏಕೆ ಬರುತ್ತವೆಯೋ ಗೊತ್ತಿಲ್ಲ. ನಾನಂತೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದರು.
ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಮತದಾರರು ನನಗೆ ಹೆಚ್ಚಿನ ಬಹುಮತ ನೀಡಿ ನನ್ನನ್ನು ಆಯ್ಕೆ ಮಾಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ನನಗೆ ಬಂದಿಲ್ಲ ಎಂದಿರುವ ಅವರು, ಈಗ ಕೇಳಿ ಬರುತ್ತಿರುವ ಸುದ್ದಿಗಳು ಕೇವಲ ವದಂತಿ ಎಂದು ಸ್ಪಷ್ಟನೆ ನೀಡಿದರು