ಮೈಸೂರು ದಸರಾ ಮತ್ತು ರಜೆಗಳ ಪ್ರಯುಕ್ತ KSRTC ವಿಶೇಷ ವ್ಯವಸ್ಥೆ

ಬೆಂಗಳೂರು: ಮೈಸೂರು ದಸರಾ-2023ನೇ ಸಾಲಿನ ದಸರಾ ಮಹೋತ್ಸವ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಆಗಮಿಸುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿದೆ. ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ (ವೇಗದೂತ), ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜೊತೆಗೆ ಈ ಕೆಳಕಂಡಂತೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು KSRTC ತಿಳಿಸಿದೆ.

ದಸರಾ ರಜೆಗಳ ಪ್ರಯುಕ್ತ ಕರಾರಸಾ ನಿಗಮದಿಂದ ೨೦೦೦ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ:

ದಸರಾ ಹಬ್ಬದ ರಜೆಗಳ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 20.10.2023ರಿಂದ 26.10.2023ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತುಅಂತರರಾಜ್ಯದ ವಿವಿಧ ಸ್ಥಳಗಳಿಗೆ ೨೦೦೦ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಆಚರಣೆ ಮಾಡಲಾಗುವುದು. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 24.10.2023ರಿಂದ 29.10.2023 ರವರೆಗೆ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಮಾಹಿತಿ ಹಂಚಿಕೊಂಡಿದ್ದಾರೆ.

ಮೈಸೂರು ದಸರಾ ಪ್ರಯುಕ್ತ KSRTC 600 ವಿಶೇಷ ಬಸ್ :

ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 250 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್.ಅಣೆಕಟ್ಟು/ಬೃಂದಾವನ ಉದ್ಯಾನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 350 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ ೬೦೦ ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ ಎಂದು ನಿಗಮ ತಿಳಿಸಿದೆ.

  • ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ “ಫ್ಲೈ ಬಸ್, ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

  • ಇ-ಟಿಕೇಟ್ ಬುಕಿಂಗ್‌ನ್ನು ವೆಬ್ ಸೈಟ್ ಅಥವಾ ಮೊಬೈಲ್ ಮುಖಾಂತರ ಮಾಡಬಹುದಾಗಿದೆ.

  • ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ KSRTC ನಿಗಮದ ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು “ಮಾಹಿತಿ ಕೇಂದ್ರ”ವನ್ನು ಪ್ರತ್ಯೇಕವಾಗಿ ತೆರೆಯಲಾಗುವುದು.

  • ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ನೆರೆರಾಜ್ಯಗಳಾದ ಆಂಧ್ರ‍್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟ ಹಾಗೂ ಪುದುಚೇರಿ ರಾಜ್ಯಗಳಲ್ಲಿರುವ ಒಟ್ಟು 703 ಗಣಕೀಕೃತ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳ ಮೂಲಕ ನಿಗಮದ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

  • ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದು.

  • ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

  • ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

Related posts