ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡಿದೆ.
ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಘೋಷಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯೇಂದ್ರ ಅವರನ್ನು ನೇಮಕಗೊಳಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲುಂಡ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾಯಿಸಬೇಕೆಂಬ ಒತ್ತಡ ಕೇಳಿಬಂದಿತ್ತು.
ಕೆಲವು ದಿನಗಳ ಹೊಂದಷ್ಟೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಜಯೇಂದ್ರ ಅವರ ಹೆಸರು ಅಧ್ಯಕ್ಷ ಸ್ಥಾನಕ್ಕೆ ಕೇಳಿಬಂದಿತ್ತು. ಇದೀಗ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿಯ ಸಾರಥ್ಯವನ್ನು ಬಿ.ವೈ.ವಿಜಯೇಂದ್ರ ಅವರಿಗೆ ವಹಿಸಿದೆ.
ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ಶ್ರೀ ಬಿ. ವೈ. ವಿಜಯೇಂದ್ರ ರವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಅಧ್ಯಕ್ಷ ಅವಧಿಯಲ್ಲಿ ಪಕ್ಷ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇನೆ.@BYVijayendra @BJP4Karnataka pic.twitter.com/BjqKQqcnRu
— Basavaraj S Bommai (Modi Ka Parivar) (@BSBommai) November 10, 2023
ಬಿಜೆಪಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಮೂಲೆ ಗುಂಪು ಮಾಡಲಾಗಿದೆ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ನಡೆದಿದೆ. ಅದಾಗಲೇ ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ಸಹಿತ ಲಿಂಗಾಯತ ಸಮುದಾಯದ ದಿಗ್ಗಜ ನಾಯಕರನ್ನು ಪಕ್ಷದಿಂದ ಹೊರಹಾಕುವ ಮೂಲಕ ಬಿಜೆಪಿ ಪಕ್ಷದಲ್ಲಿ ಲಿಂಗಾಯತ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿತ್ತು. ಇದೀಗ ಲಿಂಗಾಯತ ಸಮುದಾಯದ ನಾಯಕನನ್ನೇ ಅದರಲ್ಲೂ ಬಿಎಸ್ವೈ ಪುತ್ರನನ್ನೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡುವ ಮೂಲಕ ಕಮಲ ಪಾಳಯದಲ್ಲಿ ಹೊಸ ಮನ್ವಂತರ ಆರಂಭವಾದಂತಾಗಿದೆ.