ಲೋಕಸಭಾ ಚುನಾವಣೆಯಲ್ಲಿ ಎಲ್ಲ ಸ್ಥಾನ ಗೆದ್ದು ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ಕೊಡೋಣ: ವಿಜಯೇಂದ್ರ

ಬೆಂಗಳೂರು: ಬರಗಾಲದ ಪರಿಸ್ಥಿತಿಯಲ್ಲೂ ಉಸ್ತುವಾರಿ ಸಚಿವರು ಪ್ರವಾಸ ಮಾಡುತ್ತಿಲ್ಲ. ರೈತರ ಸಮಸ್ಯೆಗೆ ಸ್ಪಂದಿಸುವುದನ್ನು ಮರೆತು, ಅಧಿಕಾರದ ದರ್ಪ, ಉದ್ಧಟತನದಿಂದ ವರ್ತಿಸುತ್ತಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಉತ್ತರವನ್ನು ಲೋಕಸಭಾ ಚುನಾವಣೆಯಲ್ಲಿ ನೀಡೋಣ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಹೊಸ ಸರಕಾರ ಬಂದಿದೆ. ಶೇ 40 ಸರ್ಕಾರ ಎಂದು ಟೀಕಿಸಿದ್ದರು. ಮತದಾರರೂ ಅದನ್ನು ನಂಬಿದರು. ಹೊಸ ಕಾಂಗ್ರೆಸ್ ಸರಕಾರ ಬಂದು 6 ತಿಂಗಳಾಗಿದೆ. ಹಗಲುದರೋಡೆ, ಭ್ರಷ್ಟಾಚಾರ ಮೇರೆ ಮೀರಿದೆ. ಶೇ 40 ಕಮಿಷನ್, ಭ್ರಷ್ಟಾಚಾರದ ಅನುಷ್ಠಾನ ಕಾಂಗ್ರೆಸ್ ಸರಕಾರದಿಂದ ಆಗುತ್ತಿದೆ ಎಂದು ಆಕ್ಷೇಪಿಸಿದರು.

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನೂ ಮರೆಯದಿರೋಣ ಎಂದು ಕಿವಿಮಾತು ಹೇಳಿದ ಅವರು, ಅವನ್ನೂ ಗಂಭೀರವಾಗಿ ಪರಿಗಣಿಸಬೇಕು ಎಂದು ಸಲಹೆ ನೀಡಿದರು. ಚುನಾವಣೆ ಗೆದ್ದ ಬಳಿಕ ನಾನು ಯಾವುದೇ ಸಮುದಾಯಕ್ಕೆ ಸೇರಿದವನಲ್ಲ. 28ಕ್ಕೆ 28 ಕ್ಷೇತ್ರ ಗೆಲ್ಲುವ ಜೊತೆಜೊತೆಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೂಡ ರಾಜ್ಯವನ್ನು ಬಿಜೆಪಿ ಭದ್ರಕೋಟೆಯಾಗಿ ಮಾಡಲು ಶ್ರಮಿಸುತ್ತೇನೆ ಎಂದರು.

ನಾವೇನೂ ಆಪರೇಷನ್ ಕಮಲ ಮಾಡುವುದಿಲ್ಲ. ಆಡಳಿತ ಪಕ್ಷದ ಶಾಸಕರೇ ರಸ್ತೆಯಲ್ಲಿ ಓಡಾಡದಂತಾಗಿದೆ. ಒಂದು ರೂಪಾಯಿ ಅನುದಾನವೂ ಸಿಗುತ್ತಿಲ್ಲ. ಈ ದುಷ್ಟ ಸರಕಾರಕ್ಕೆ ಆ ಪಕ್ಷದ ಶಾಸಕರೇ ಪಾಠ ಕಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಲ್ಲ ಹಿರಿಯರ ಮಾರ್ಗದರ್ಶನದಲ್ಲಿ, ಸಂಘ ಪರಿವಾರದ ಮಾರ್ಗದರ್ಶನದಡಿ ಬಿಜೆಪಿಗೆ ಶಕ್ತಿ ತುಂಬುತ್ತೇನೆ. ಹಗಲು ರಾತ್ರಿ ಪ್ರವಾಸ ಮಾಡಿ, ರೈತರು, ಬಡವರ ಪರವಾಗಿ ಧ್ವನಿ ಎತ್ತುವೆ. ಭ್ರಷ್ಟ ಸರಕಾರದ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಪ್ರಕಟಿಸಿದರು.

Related posts