ಬೆಂಗಳೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಅಸಂವಿಧಾನಿಕ ನಡೆ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಯಿತು.
ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕರ್ನಾಟಕ ವಿಧಾನ ಪರಿಷತ್ ನ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಮುಖ್ಯಮಂತ್ರಿಗಳ ವಿರುದ್ಧ ಪ್ರಾಷಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರು ಅಯೋಗ್ಯ ಹಾಗೂ ಬೇಜಾವಾಬ್ದಾರಿ ಗವರ್ನರ್ ಎಂದು ಕಿಡಿಕಾರಿದರು.
ನುಡಿದಂತೆ ನಡೆದು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ಹಾಗೂ ಕೇಂದ್ರ ಸರ್ಕಾರವು ಷಡ್ಯಂತ್ರ ರೂಪಿಸಿದ್ದಾರೆ ಎಂದ ಅವರು, ಮೋದಿ ಅಮಿತ್ ಷಾ ಅವರ ಒತ್ತಡಕ್ಕೆ ಮಣಿದು ರಾಜ್ಯಪಾಲರು ಯಾವುದೇ ದಾಖಲೆ ಪರಿಶೀಲನೆ ನಡೆಸದೆ ನೇರವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂದು ಆರೀಪಿಸಿದರು.
ರಾಜ್ಯಪಾಲರು ರಾಜಭವನವನ್ನು ಬಿಜೆಪಿ ಕಚೇರಿಯಾಗಿ ಪರಿವರ್ತಿಸಿದ್ದಾರೆ ಎಂಬುದಕ್ಕೆ ಇದು ಸಾಕ್ಷಿ. ಈ ಮೂಲಕ ಗೌರವಯುತ ಸ್ಥಾನದಲ್ಲಿರುವ ರಾಜ್ಯಪಾಲರು ಕೇಂದ್ರ ಸರ್ಕಾರದ ಏಜೆಂಟ್ ಆಗಿ ಕೆಲಸ ಮಾಡಿ ತಮ್ಮ ಘನತೆ ಕಳೆದುಕೊಂಡಿದ್ದಾರೆ. ಇದು ರಾಜ್ಯಪಾಲರ ಗೌರವಯುತ ಸ್ಥಾನಕ್ಕೆ ಕಳಂಕ ಎಂದರು.