ಈ ಬಾರಿ ಜನೋತ್ಸವವಾಗಿ ‘ಕಲ್ಯಾಣ ಕರ್ನಾಟಕ ಉತ್ಸವ’: ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ಜನೋತ್ಸವವನ್ನಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಜನಪ್ರತಿನಿಧಿಗಳೊಂದಿಗೆ ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಸಭೆಯಲ್ಲಿ ಮಾತನಾಡಿದ ಸಚಿವರು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾರಣವಾದ 371 ಜೆ ಅಸ್ಥಿತ್ವಕ್ಕೆ ಬಂದು ಹತ್ತು ವರ್ಷಗಳು ಸಂದ ಸಂದರ್ಭದಲ್ಲಿ ದಶಮಾನೋತ್ಸವವನ್ನು ಆಚರಿಸುತ್ತಿರುವದರಿಂದ ಈ ಬಾರಿಯ ಉತ್ಸವವನ್ನು ಅರ್ಥಗರ್ಭಿತವಾಗಿ ಆಚರಿಸಲು ಕಾರ್ಯಕ್ರಮಗಳನ್ನು ರೂಪಿಸುವಂತೆಯೂ ಪಾಟೀಲ್ ಹೇಳಿದರು.

ಸೆಪ್ಟೆಂಬರ್‌ 17ರಂದು ಮುಖ್ಯಮಂತ್ರಿಗಳು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ ಸಚಿವರು ಸ್ಥಳೀಯ ಪಾರಂಪರಿಕ ಜಾನಪದ ಕಲೆಗಳೊಂದಿಗೆ ಕರ್ನಾಟಕದ ವೈವಿಧ್ಯಮಯ ಜಾನಪದ ಕಲೆಗಳನ್ನು ಒಟ್ಟುಗೂಡಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾದರ ಪಡಿಸಲು ಅಧಿಕಾರಿಗಳಿಗೆ ಪಾಟೀಲ್ ಸೂಚಿಸಿದರು.

ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯ್‌ಸಿಂಗ್, ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಿ.ಆರ್.ಪಾಟೀಲ್‌, ಶಾಸಕರಾದ ಎಂ.ವೈ.ಪಾಟೀಲ್,ಜಗದೇವ ಗುತ್ತೇದಾರ್‌, ಅಲ್ಲಮಪ್ರಭು ಪಾಟೀಲ್‌, ತಿಪ್ಪಣ್ಣಪ್ಪ ಕಮಕನೂರ್‌, ಶ್ರೀಮತಿ ಖನಿಜಾ ಫಾತಿಮಾ ಭಾಗವಹಿಸಿದ್ದರು. ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜವೇಯಿ ,ಜಿಲ್ಲಾಧಿಕಾರಿ ಫೌಜಿಯಾ ತನರನುಮ್‌, ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಭಂವರ್‌ ಸಿಂಗ್‌, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸಭೆಯಲ್ಲಿ ಪಾಲ್ಗೊಂಡಿದ್ದರು.

Related posts