ಮಲ್ಪೆಯಲ್ಲಿ‌ ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಥಳಿತ; ನಾಲ್ವರ ಬಂಧನ

ಉಡುಪಿ: ಮೀನು ಅಳ್ಳತನ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಆರೋಪದಲ್ಲಿ ಉಡುಪಿ ಜಿಲ್ಲಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ಮಾಡಲಾಗಿತ್ತು. ಮಾರ್ಚ್ 18 ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಕಾರ್ಯಾಚರಣೆ ನಡೆಸಿ ಕೃತ್ಯ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ.

ಇನ್ನೊಂದೆಡೆ, ಹಲ್ಲೆ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು ಎಂದಿರುವ ಸಿಎಂ, ಕಾರಣವೇನೇ ಇರಲಿ ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧ ಎಂದಿದ್ದಾರೆ.

ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ, ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ,
ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದಿದ್ದಾರೆ.

ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ಸಿಎಂ ತಿಳಿಸಿದ್ದಾರೆ.

Related posts