ಬೆಂಗಳೂರು: ಜುಲೈ 3ರಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ವಿಶೇಷವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ 3ರ ನಂತರ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಮುಂಜಾಗ್ರತೆಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯ ಸಾಧ್ಯತೆ ಇದ್ದು, ಅಲ್ಲಿಯೂ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.
ಇನ್ನು ದಕ್ಷಿಣ ಹಾಗೂ ಉತ್ತರ ಒಳನಾಡಿನ ಬೆಂಗಳೂರಿನ ಗ್ರಾಮಾಂತರ ಮತ್ತು ನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.