ಬೆಳಗಾವಿ: ಬಿಹಾರ ವಿಧಾನಸಭಾ ಚುನಾವಣೆಗೆ ಹಣ ಸಂಗ್ರಹಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚಿಗೆ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜಿಸಿದ್ದರು ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಬಿಹಾರ ಚುನಾವಣೆಗೆ ಹಣವನ್ನು ಸಂಗ್ರಹಿಸುವ ಉದ್ದೇಶವನ್ನು ಸಿದ್ದರಾಮಯ್ಯ ಈಡೇರಿಸಬೇಕಿದೆ. ಈ ಊದೇಶಕ್ಕಾಗಿ ಅವರು ಮಂತ್ರಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದ ಪ್ರತಿಯೊಬ್ಬರಲ್ಲೂ ಚುನಾವಣೆಗೆ ಹಣ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಬಾಂಬ್ ಸಿಡಿಸಿದರು.
ಕರ್ನಾಟಕವನ್ನು ಚುನಾವಣೆಗೆ ಎಟಿಎಂ ಆಗಿ ಕಾಂಗ್ರೆಸ್ ಹೈಕಮಾಡ್ ಮಾಡಿಕೊಂಡಿದೆ ಎಂದು ಅವರು ದೂರಿದರು.
ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ರಾಜ್ಯ ಘಟಕದಲ್ಲಿ ಆಂತರಿಕ ಕಚ್ಚಾಟ ಹೆಚ್ಚಿದ್ದು, ಸಿಎಂ ಸ್ಥಾನದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಶೆಟ್ಟರ್ ವಿಶ್ಲೇಷಿಸಿದರು.
