ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶದ ಪ್ರತಿಧ್ವನಿ; ಕಾಂಗ್ರೆಸ್’ನಿಂದ ಕಾನೂನು ಸಮರ ಘೋಷಣೆ

ಮೈಸೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆಯಲ್ಲಿ ಬಿಜೆಪಿ ಕ್ರಿಮಿನಲ್ ಪಿತೂರಿಯಲ್ಲಿ ತೊಡಗಿದೆ ಎಂದು ಆರೋಪಿಸಿದರು.

ರಾಜೇಗೌಡ ಅವರ ಪರವಾಗಿ ಬಿದ್ದಿದ್ದ 255 ಸಿಂಧು ಮತಗಳನ್ನು ಅಮಾನ್ಯಗೊಳಿಸಲಾಗಿದೆ. ಮತ ಎಣಿಕೆಯ ಸಮಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಬಿಜೆಪಿ ಸದಸ್ಯರು ತಮ್ಮ ಸಿಬ್ಬಂದಿಯ ಮೂಲಕ ಮತಪತ್ರಗಳನ್ನು ತಿರುಚಿರುವುದು ಕ್ರಿಮಿನಲ್ ಪಿತೂರಿಯ ಭಾಗವಾಗಿದೆ. ಆದ್ದರಿಂದ ಶೃಂಗೇರಿ ಕ್ಷೇತ್ರದ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ರೈಲ್ವೆ ಇಲಾಖೆಯ ನೇಮಕಾತಿ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಗಳಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದರು. ರೈಲ್ವೆ ಇಲಾಖೆಯ ಹುದ್ದೆಗಳಿಗೆ ಕನ್ನಡಿಗರನ್ನು ಬದಿಗಿಡಲಾಗುತ್ತಿದ್ದು, ಇದು ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರದ ನಿಲುವನ್ನು ತೋರಿಸುತ್ತದೆ ಎಂದು ಟೀಕಿಸಿದರು.

Related posts