ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ INDIA ಒಕ್ಕೂಟದ ಹಲವು ಸಂಸದರನ್ನು ದೆಹಲಿ ಪೊಲೀಸರು ಮಂಗಳವಾರ ವಶಕ್ಕೆ ಪಡೆದರು.
ಸಂಸತ್ ಭವನದ ಆವರಣದಿಂದ ನಿರ್ವಾಚನ ಸದನ್‌ನತ್ತ INDIA ಒಕ್ಕೂಟದ ಸಂಸದರು ಮೆರವಣಿಗೆ ಆರಂಭಿಸಿದ್ದರು. ಆದರೆ ಸಂಸತ್ ರಸ್ತೆಯಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಮೆರವಣಿಗೆಯನ್ನು ತಡೆದರು. ಇದರಿಂದ ಆಕ್ರೋಶಗೊಂಡ ಸಂಸದರು ರಸ್ತೆಯಲ್ಲೇ ಧರಣಿ ನಡೆಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿದರು.

ಭದ್ರತಾ ಸಿಬ್ಬಂದಿ ಮೆರವಣಿಗೆಯನ್ನು ತಡೆದ ಸಂದರ್ಭದಲ್ಲಿ ರಾಹುಲ್ ಗಾಂಧಿ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಪೊಲೀಸ್ ಬ್ಯಾರಿಕೇಡ್ ಏರಿದ ಘಟನೆ ಕೂಡ ನಡೆಯಿತು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಟಿಎಂಸಿ ನಾಯಕರುಗಳಾದ ಅಭಿಷೇಕ್ ಬ್ಯಾನರ್ಜಿ, ಡೆರೆಕ್ ಒಬ್ರಿಯಾನ್, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಸಿಪಿಐ(ಎಂ) ನಾಯಕ ಜಾನ್ ಬ್ರಿಟ್ಟಾಸ್ ಹಾಗೂ ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನಾಕಾರರು ಜ್ಞಾನೇಶ್ ಕುಮಾರ್ ಅವರನ್ನು ಆರ್‌ಎಸ್‌ಎಸ್ ಸಮವಸ್ತ್ರದಲ್ಲಿ ಚಿತ್ರಿಸಿರುವ ಕಟೌಟ್‌ಗಳನ್ನು ಪ್ರದರ್ಶಿಸಿದರು. “ವೋಟ್ ಚೋರ್, ಗದ್ದಿ ಛೋಡ್”, “ಬಿಜೆಪಿ ಹೈ, ಸಿಇಸಿ ಹೈ” ಹಾಗೂ “ಪ್ರಜಾಪ್ರಭುತ್ವ ಮಾರಾಟಕ್ಕಿಲ್ಲ” ಎಂಬ ಘೋಷಣೆಗಳನ್ನು ಕೂಗಿದರು.
ಈ ನಡುವೆ ರಾಹುಲ್ ಗಾಂಧಿ ಎಕ್ಸ್‌ನಲ್ಲಿ, “ಜ್ಞಾನೇಶ್, ನಿಮ್ಮ ಸಮಯ ಮುಗಿದಿದೆ ಸಹೋದರ. ರಾಜೀನಾಮೆ ನೀಡುವ ಸಮಯ ಬಂದಿದೆ” ಎಂದು ಪೋಸ್ಟ್ ಮಾಡಿದ್ದಾರೆ.
ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ವೇಳೆ ಮತದಾರರ ನೋಂದಣಿಗೆ ಬಳಸುವ ಫಾರ್ಮ್-6ರಲ್ಲಿ ಮಾಡಿರುವ ಬದಲಾವಣೆಗಳ ವಿಚಾರವೇ ಪ್ರತಿಭಟನೆಗೆ ಪ್ರಮುಖ ಕಾರಣವಾಗಿದೆ. ಫಾರ್ಮ್-6ರ ಪರಿಷ್ಕೃತ ಮಾದರಿಗೆ ಸುಪ್ರೀಂ ಕೋರ್ಟ್ ಅನುಮೋದನೆ ನೀಡಿಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿತ್ತು.
ಫಾರ್ಮ್‌ನಲ್ಲಿ ಬದಲಾವಣೆ ಮಾಡಲಾಗಿದೆಯೇ ಹಾಗೂ ಅದಕ್ಕೆ ಅನುಮತಿ ನೀಡಿದವರು ಯಾರು ಎಂಬುದನ್ನು ತಿಳಿಯಲು ಚುನಾವಣಾ ಆಯೋಗದ ದಾಖಲೆಗಳನ್ನು ಪರಿಶೀಲಿಸುವುದಾಗಿ ನ್ಯಾಯಾಲಯ ತಿಳಿಸಿತ್ತು.
ಇದನ್ನೇ ಮುಂದಿಟ್ಟುಕೊಂಡಿರುವ ಪ್ರತಿಪಕ್ಷಗಳು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿವೆ. ಸಿಇಸಿ ಜ್ಞಾನೇಶ್ ಕುಮಾರ್ ಜನರನ್ನು ದಾರಿತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿರುವ ನಾಯಕರು, ಅವರು ಹುದ್ದೆಯಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಚುನಾವಣಾ ಆಯೋಗದ ಮೇಲಿನ ಜನರ ವಿಶ್ವಾಸ ಕುಗ್ಗಿದೆ ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಆರೋಪಿಸಿದ್ದಾರೆ. ಸಿಪಿಐ ಸಂಸದ ಪಿ. ಸಂತೋಷ್ ಕುಮಾರ್ ಕೂಡ ಸುಪ್ರೀಂ ಕೋರ್ಟ್‌ನ ಇತ್ತೀಚಿನ ಅಭಿಪ್ರಾಯಗಳು ಪ್ರತಿಪಕ್ಷಗಳ ಆಕ್ಷೇಪಗಳಿಗೆ ಮತ್ತಷ್ಟು ಬಲ ನೀಡಿವೆ ಎಂದು ಹೇಳಿದ್ದಾರೆ.
ಮೆರವಣಿಗೆ ಹಿನ್ನೆಲೆಯಲ್ಲಿ ಸಂಸತ್ ಭವನ ಹಾಗೂ ಚುನಾವಣಾ ಆಯೋಗದ ಕಚೇರಿ ಸುತ್ತಮುತ್ತ ಭಾರಿ ಭದ್ರತೆ ಕೈಗೊಳ್ಳಲಾಗಿತ್ತು. ಹೆಚ್ಚುವರಿ ಪೊಲೀಸ್ ಪಡೆ, ಬ್ಯಾರಿಕೇಡ್‌ಗಳನ್ನು ನಿಯೋಜಿಸಲಾಗಿತ್ತು.
ಆದರೆ, ವಿಶೇಷ ತೀವ್ರ ಪರಿಷ್ಕರಣೆ ಕುರಿತ ನಿರ್ಧಾರಗಳನ್ನು ಚುನಾವಣಾ ಆಯೋಗದ ಮೂವರು ಸದಸ್ಯರು ಸರ್ವಾನುಮತದಿಂದ ಕೈಗೊಂಡಿದ್ದಾರೆ ಎಂದು ಆಯೋಗ ಸ್ಪಷ್ಟಪಡಿಸಿದ್ದು, ಆಯೋಗದಲ್ಲಿ ಭಿನ್ನಾಭಿಪ್ರಾಯವಿದೆ ಎಂಬ ಆರೋಪವನ್ನು ತಳ್ಳಿಹಾಕಿದೆ.

