ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ಜಿಲ್ಲಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಪ್ರಭಾರಿ ಜಿಲ್ಲಾಧಿಕಾರಿ ರಾಹುಲ್ ಶಿಂಧೆ ಆದೇಶ ಹೊರಡಿಸಿದ್ದಾರೆ. ನವೆಂಬರ್ 6ರ ಬೆಳಗ್ಗೆ 6ರವರೆಗೆ ನಿಷೇಧ ಜಾರಿಯಲ್ಲಿರಲಿದೆ.
ರೈತ ಮುಖಂಡರಾದ ಚೂನಪ್ಪ ಪೂಜಾರಿ ಮತ್ತು ಶಶಿಕಾಂತ ಗುರೂಜಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ರೈತರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಹಲವು ಭಾಗಗಳಲ್ಲಿ ಹೋರಾಟ ತೀವ್ರಗೊಂಡಿದ್ದು, ಕೆಲವೆಡೆ ರಸ್ತೆ ತಡೆ ನಡೆಸಲಾಗಿದೆ. ರಾಜ್ಯ ಹೆದ್ದಾರಿಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು, ಪ್ರತಿಭಟನೆಗಳ ಮೇಲೆ ನಿಗಾ ಇರಿಸಿದ್ದಾರೆ.

