ಕ್ರೀಡಾ ಮೀಸಲಾತಿಯಡಿ 1,500 ಹುದ್ದೆ ಕ್ರೀಡಾಪಟುಗಳಿಗೆ ಮೀಸಲು: ಡಾ. ಜಿ. ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಜೊತೆಗೆ ಪ್ರತಿಭಾವಂತ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿಯೂ ಅವಕಾಶ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಘೋಷಿಸಿರುವ 72 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ 1,500 ಹುದ್ದೆಗಳನ್ನು ಕ್ರೀಡಾಪಟುಗಳಿಗೆ ಮೀಸಲಿಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಬೆಂಗಳೂರಿನ ಅಕ್ಕಿತಿಮ್ಮನಹಳ್ಳಿಯ ಕರ್ನಾಟಕ ರಾಜ್ಯ ಹಾಕಿ ಸ್ಟೇಡಿಯಂನಲ್ಲಿ ಭಾನುವಾರ ಅಜ್ಜಿ ಕುಟ್ಟೀರ ಕುಟುಂಬ ಕ್ರೀಡಾ, ಶಿಕ್ಷಣ ಮತ್ತು ಸಾಂಸ್ಕೃತಿಕ ಧರ್ಮದತ್ತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 27ನೇ ಕೊಡವ ಕುಟುಂಬಗಳ ಹಾಕಿ ಉತ್ಸವ ‘ಅಜ್ಜಿ ಕುಟ್ಟೀರ ಹಾಕಿ ನಮ್ಮೆ’ಯ ಲಾಂಛನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ₹1 ಕೋಟಿ ಪ್ರೋತ್ಸಾಹಧನ ನೀಡುತ್ತಿದೆ. ಪೊಲೀಸ್, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕ್ರೀಡಾ ಮೀಸಲಾತಿ ಜಾರಿಯಲ್ಲಿದ್ದು, ನೂರಾರು ಕ್ರೀಡಾಪಟುಗಳು ಇದರ ಪ್ರಯೋಜನ ಪಡೆದಿದ್ದಾರೆ. ಅರ್ಹ ಕ್ರೀಡಾಪಟುಗಳಿಗೆ ವಿವಿಧ ಇಲಾಖೆಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದರು.

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಹಾಕಿ ಮೈದಾನ ನಿರ್ಮಾಣಕ್ಕೆ 14 ಎಕರೆ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ 42 ಎಕರೆ ಭೂಮಿ ಮೀಸಲಿಡಲಾಗಿದೆ. ಸುಮಾರು ₹78 ಕೋಟಿ ವೆಚ್ಚದಲ್ಲಿ ತುಮಕೂರಿನಲ್ಲಿ ಕ್ರೀಡಾಂಗಣ ನಿರ್ಮಿಸಲಾಗಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿಯೂ ಸುಸಜ್ಜಿತ ಕ್ರೀಡಾಂಗಣ ಮತ್ತು ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸುವ ಉದ್ದೇಶವಿದೆ ಎಂದು ತಿಳಿಸಿದರು.

ಬೆಂಗಳೂರಿನ ನಾಲ್ಕು ಭಾಗಗಳಲ್ಲಿ ಕ್ರೀಡಾಂಗಣ ಮತ್ತು ಕಬ್ಬನ್ ಪಾರ್ಕ್ ಮಾದರಿಯ ಉದ್ಯಾನವನ ನಿರ್ಮಿಸುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ಬಿಡಿಎ ಅಧ್ಯಕ್ಷ ಹ್ಯಾರಿಸ್ ಅವರು ಸೂಕ್ತ ಜಾಗ ಗುರುತಿಸಬೇಕು. ಜಾಗ ಗುರುತಿಸಿದರೆ ₹50ರಿಂದ ₹100 ಕೋಟಿ ಅನುದಾನ ಒದಗಿಸಲು ಮುಖ್ಯಮಂತ್ರಿಗಳ ಮನವೊಲಿಸುವುದಾಗಿ ಹೇಳಿದರು. ವಿಜಯಪುರದಲ್ಲಿ ಸೈಕ್ಲಿಂಗ್‌ಗೆ ಹೆಚ್ಚಿನ ಆಸಕ್ತಿ ಇರುವುದರಿಂದ ಅಲ್ಲಿ ವೆಲೋಡ್ರೋಮ್ ನಿರ್ಮಿಸುವ ಅಗತ್ಯವಿದೆ ಎಂದರು.

ಯುವಜನರನ್ನು ಮಾದಕ ವಸ್ತುಗಳಿಂದ ದೂರವಿಡಲು ಕ್ರೀಡೆ ಪರಿಣಾಮಕಾರಿ ಸಾಧನವಾಗಿದೆ. ಕ್ರೀಡೆಯಿಂದ ಶಿಸ್ತು, ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಮನೋಭಾವ ಬೆಳೆಯುತ್ತದೆ. ಶಾಲಾ ಹಂತದಲ್ಲಿಯೇ ದೈಹಿಕ ಶಿಕ್ಷಣಕ್ಕೆ ಆದ್ಯತೆ ನೀಡಿ, ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ತರಬೇತಿ ಮತ್ತು ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ಕೊಡವ ಸಮುದಾಯದ ಸಂಸ್ಕೃತಿ, ಪರಂಪರೆ ಮತ್ತು ಸಂಘಟನಾ ಶಕ್ತಿಯನ್ನು ಶ್ಲಾಘಿಸಿದ ಅವರು, 1997ರಲ್ಲಿ ಸುಮಾರು 60 ಕುಟುಂಬಗಳಿಂದ ಆರಂಭವಾದ ಕೊಡವ ಕುಟುಂಬಗಳ ಹಾಕಿ ಉತ್ಸವ ಇಂದು 250ರಿಂದ 300ಕ್ಕೂ ಹೆಚ್ಚು ಕುಟುಂಬಗಳ ಭಾಗವಹಿಸುವಿಕೆಗೆ ಸಾಕ್ಷಿಯಾಗಿದೆ ಎಂದರು. ಇದು ಕೇವಲ ಕ್ರೀಡಾಕೂಟವಲ್ಲ; ಸಮುದಾಯದ ಒಗ್ಗಟ್ಟು, ಸಂಸ್ಕೃತಿ ಮತ್ತು ಕ್ರೀಡಾ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ವೇದಿಕೆಯಾಗಿದೆ ಎಂದು ಹೇಳಿದರು.

ಭಾರತ ಹಾಕಿಯಲ್ಲಿ ಒಲಿಂಪಿಕ್ಸ್‌ನಲ್ಲಿ ಎಂಟು ಬಾರಿ ಚಿನ್ನದ ಪದಕ ಗೆದ್ದಿದ್ದು, ಮತ್ತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಶಾಲೆ ಮತ್ತು ವಿಶ್ವವಿದ್ಯಾಲಯಗಳ ಹಂತದಲ್ಲಿ ಕ್ರೀಡೆಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂದರು.

‘ಅಜ್ಜಿ ಕುಟ್ಟೀರ ಹಾಕಿ ನಮ್ಮೆ–2027’ ಯಶಸ್ವಿಯಾಗಲಿ ಎಂದು ಹಾರೈಸಿದ ಅವರು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಲಿರುವ ಕ್ರೀಡಾಕೂಟವನ್ನು ವೀಕ್ಷಿಸಲು ಅವಕಾಶ ದೊರೆತರೆ ಆಗಮಿಸುವುದಾಗಿ ತಿಳಿಸಿದರು.

Related posts