ನಗರ ಸ್ಥಳೀಯ ಸಂಸ್ಥೆಗಳ ಸೇವೆ ಒಂದೇ ಡಿಜಿಟಲ್ ವೇದಿಕೆಯಲ್ಲಿ: ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಆಡಳಿತ ವ್ಯವಸ್ಥೆಯನ್ನು ಪಾರದರ್ಶಕ, ಪರಿಣಾಮಕಾರಿ, ಜನಸ್ನೇಹಿ ಹಾಗೂ ತಂತ್ರಜ್ಞಾನ ಆಧಾರಿತವಾಗಿಸುವ ಉದ್ದೇಶದಿಂದ ರೂಪಿಸಿರುವ ‘POURSEVE’ URBAN ERP ಸೂಟ್ ಕುರಿತು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಪ್ರಾತ್ಯಕ್ಷಿಕೆ ವೀಕ್ಷಿಸಿ ಮಾಹಿತಿ ಪಡೆದರು.

ಬೆಂಗಳೂರಿನ ಗೃಹ ಕಚೇರಿಯಲ್ಲಿ ನಡೆದ ಪ್ರಾತ್ಯಕ್ಷಿಕೆಯಲ್ಲಿ, ಆಸ್ತಿ ತೆರಿಗೆ, ಕುಡಿಯುವ ನೀರು, ವ್ಯಾಪಾರ ಪರವಾನಗಿ, ಮಾರುಕಟ್ಟೆ ಮತ್ತು ಮಳಿಗೆಗಳ ಬಾಡಿಗೆ, ಆನ್‌ಲೈನ್ ಪಾವತಿ, ಸಾರ್ವಜನಿಕ ಕುಂದುಕೊರತೆಗಳ ಪರಿಹಾರ, ಘನತ್ಯಾಜ್ಯ ನಿರ್ವಹಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಮೇಲ್ವಿಚಾರಣೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಪ್ರಮುಖ ಸೇವೆಗಳನ್ನು ಒಂದೇ ಡಿಜಿಟಲ್ ವೇದಿಕೆಯಲ್ಲಿ ನಿರ್ವಹಿಸುವ ವ್ಯವಸ್ಥೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು.

ಕೃತಕ ಬುದ್ಧಿಮತ್ತೆ (AI), GIS ತಂತ್ರಜ್ಞಾನ, ಡಿಜಿಟಲ್ ದಾಖಲೆ ನಿರ್ವಹಣೆ, ರಿಯಲ್‌ಟೈಮ್ ಡ್ಯಾಶ್‌ಬೋರ್ಡ್ ಮತ್ತು ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಮೂಲಕ ಆಡಳಿತದ ವೇಗ, ಪಾರದರ್ಶಕತೆ ಹಾಗೂ ಹೊಣೆಗಾರಿಕೆಯನ್ನು ಹೆಚ್ಚಿಸಲು ಸಾಧ್ಯವಾಗಲಿದೆ ಎಂದು ಸಚಿವರು ತಿಳಿಸಿದರು.

 

ಈಗಾಗಲೇ ನಗರಾಭಿವೃದ್ಧಿ ಇಲಾಖೆಯಲ್ಲಿ ಅಭಿವೃದ್ಧಿಪಡಿಸಿರುವ ಡಿಜಿಟಲ್ ವ್ಯವಸ್ಥೆಗಳ ಪುನರಾವರ್ತನೆ ತಪ್ಪಿಸುವುದು, ಉತ್ತಮ ತಂತ್ರಾಂಶಗಳನ್ನು ಸಮನ್ವಯಗೊಳಿಸುವುದು, ಇಲಾಖೆಗೆ ಸಂಪೂರ್ಣ ಸೋರ್ಸ್ ಕೋಡ್ ಹಸ್ತಾಂತರಿಸುವುದು ಹಾಗೂ ಮುಂದಿನ ಮೂರು ವರ್ಷಗಳ ಕಾಲ ತಾಂತ್ರಿಕ ನೆರವು ಒದಗಿಸುವ ಪ್ರಸ್ತಾವನೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ನಗರಾಡಳಿತದಲ್ಲಿ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡು ಜನರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ, ತ್ವರಿತವಾಗಿ ಮತ್ತು ಪಾರದರ್ಶಕವಾಗಿ ತಲುಪಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಬಿ.ಬಿ. ಕಾವೇರಿ, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ರಾಜ್ಯಾಧ್ಯಕ್ಷೆ ಶೈಲಾ ಕೆ.ಡಿ., ಸಾಫ್ಟ್‌ವೇರ್ ಕಂಪನಿ ಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts