ಗುಲಾಬಿ ಸೇನೆಯ ಅನಿರ್ದಿಷ್ಟಾವಧಿ ಹೋರಾಟ 11ನೇ ದಿನವೂ ಮುಂದುವರಿದ ‘ಆಶಾ’ ಸತ್ಯಾಗ್ರಹ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ AIUTUC ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟ 11ನೇ ದಿನಕ್ಕೆ ಕಾಲಿಟ್ಟಿದೆ. ಗುರುವಾರ ಫ್ರೀಡಂ ಪಾರ್ಕ್‌ನಲ್ಲಿ ನಡೆದ 10ನೇ ದಿನದ ಪ್ರತಿಭಟನೆಯಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಸಾಮಾಜಿಕ ಹೋರಾಟಗಾರರು ಹಾಗೂ ಸಂಘಟನೆಗಳ ಮುಖಂಡರು ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ ಮಾತನಾಡಿ, ಆಶಾ ಕಾರ್ಯಕರ್ತೆಯರ ಹೋರಾಟ ದೇಶದ ಗಮನ ಸೆಳೆದಿದ್ದು, ಅವರ ಬೇಡಿಕೆಗಳು ನ್ಯಾಯಯುತವಾಗಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ದೂಷಿಸುವುದನ್ನು ಬಿಟ್ಟು ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ರಾಜಕೀಯ ಪಕ್ಷಗಳು ತಮ್ಮ ಸರ್ಕಾರದ ಸಚಿವರ ಮೇಲೆ ಒತ್ತಡ ಹೇರಬೇಕು ಎಂದರು.

ಲೇಖಕಿ ವಿಜಯಮ್ಮ ಮಾತನಾಡಿ, ಮಹಿಳೆಯರು ಮನೆ ಬಿಟ್ಟು ಹತ್ತು ದಿನಗಳ ಕಾಲ ಹೋರಾಟದಲ್ಲಿ ಭಾಗವಹಿಸಿರುವುದು ಸಾಮಾನ್ಯ ಸಂಗತಿಯಲ್ಲ. ದುಡಿಯುವ ಮಹಿಳೆಯರಿಗೆ ಸೂಕ್ತ ವೇತನ ಮತ್ತು ಆಶ್ರಯ ಕಲ್ಪಿಸದಿರುವುದು ದುರಂತ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತನಾಡಿ, ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ತಾಳಿರುವ ಧೋರಣೆ ಸರಿಯಲ್ಲ. ಆಶಾಗಳಿಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತದೆ ಎಂಬ ಆರೋಗ್ಯ ಸಚಿವರ ಹೇಳಿಕೆ ಖಂಡನೀಯ. ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಿಸಬಾರದು. ಅಗತ್ಯವಿದ್ದರೆ ಆಶಾ ಕಾರ್ಯಕರ್ತೆಯರ ಪರವಾಗಿ ಜೈಲಿಗೂ ಹೋಗಲು ಸಿದ್ಧ ಎಂದರು.

ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಮುಖಂಡ ಪ್ರವೀಣ್ ಶೆಟ್ಟಿ, ಎಐಡಿಎಸ್‌ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ರೈತ ಮುಖಂಡರಾದ ಮಂಜು ಕಿರಣ್ ಹಾಗೂ ಚುಕ್ಕಿ ನಂಜುಂಡಸ್ವಾಮಿ ಕೂಡ ಹೋರಾಟಕ್ಕೆ ಬೆಂಬಲ ಸೂಚಿಸಿ, ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಧಾರಾವಾಹಿ ನಟರಾದ ಎಂ.ಟಿ. ರಾಮಸ್ವಾಮಿ, ಗಣೇಶ್ ರಾವ್ ಕೆಸರ್‌ಕರ್ ಹಾಗೂ ಬಿಗ್‌ಬಾಸ್ ಖ್ಯಾತಿಯ ಪ್ರಥಮ್ ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಆಶಾ ಸಂಘದ ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ, ಕಾರ್ಯದರ್ಶಿ ಡಿ. ನಾಗಲಕ್ಷ್ಮಿ, ಉಪಾಧ್ಯಕ್ಷೆ ಎಂ. ಉಮಾದೇವಿ ಹಾಗೂ ಎಐಯುಟಿಯುಸಿ ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ್, ಉಪಾಧ್ಯಕ್ಷ ವೀರೇಶ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Related posts