ಕೊಪ್ಪಳ: ಮುಖ್ಯಮಂತ್ರಿ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದು ಯಡಿಯೂರಪ್ಪ ಜೊತೆ ಅಸಂವಿಧಾನಿಕ ಮುಖ್ಯಮಂತ್ರಿಯಾಗಿ ವಿಜಯೇಂದ್ರ ಕೆಲಸ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ವಿಜಯೇಂದ್ರ ಕಾರ್ಯವೈಖರಿಯಿಂದಾಗಿಯೇ ಆಡಳಿತ ಪಕ್ಷದಲ್ಲಿ ಭಿನ್ನಮತ ಉಂಟಾಗಿದೆ ಎಂದು ವಿಶ್ಲೇಷಣೆ ಮಾಡಿದರು. ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಹಾಗಾಗೇ ಶಾಸಕರು ಬಂಡಾಯ ಹೇಳುತ್ತಿದ್ದಾರೆ ಎಂದು ದೂರಿದರು. ಒಂದು ವೇಳೆ ಭಿನ್ನಮತದಿಂದಾಗಿ ಬಿಜೆಪಿ ಸರ್ಕಾರ ಬಿದ್ದರೇ ಅದಕ್ಕೆ ಬಿಜೆಪಿಯವರೇ ಹೊಣೆ ಎಂದರು.
ಸಿದ್ದರಾಮಯ್ಯ ಬೊಕ್ಕಸ ಖಾಲಿ ಮಾಡಿದ್ದಾರೆ ಎಂಬ ಸಚಿವ ಸಿ.ಟಿ. ರವಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಹಣಕಾಸಿನ ಬಗ್ಗೆ ಅಜ್ಞಾನದಿಂದ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆಂದು ತರಾಟೆಗೆ ತೆಗೆದುಕೊಂಡರು.