ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಾಂಡವವಾಡುತ್ತಿದ್ದು ಜನಸಾಮಾನ್ಯರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ಸಂಕಟ ಕಾಲದಲ್ಲೂ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ಕೆಲವು ಆಸ್ಪತ್ರೆಗಳು ನಿರಾಕರಿಸುತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿವೆ.
ಈ ಆರೋಪಗಳ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಮತ್ತು ಕ್ರಿಮಿನಲ್ ಕೇಸು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಈ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಅಂಬುಲನ್ಸ್ ಸೌಲಭ್ಯವನ್ನೂ ಕಲ್ಪಿಸಲಾಗಿದೆ. ಹಾಗಾಗಿ ಜನರು ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಸುಧಾಕರ್ ಹೇಳಿದ್ದಾರೆ.
ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವುದು ಕಾನೂನು ಬಾಹಿರ. ಯಾವುದೇ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿರುವುದು ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು. ಆಸ್ಪತ್ರೆಗಳಲ್ಲಿ ದಾಖಲಾತಿ, ಚಿಕಿತ್ಸೆ ಮತ್ತು ಇತರೆ ಯಾವುದೇ ದೂರು ಇದ್ದರೆ ಸಾರ್ವಜನಿಕರು 1912ಗೆ ಕರೆ ಮಾಡಿದರೆ ಕೂಡಲೇ ಸ್ಪಂದಿಸಲಾಗುವುದು. @BSYBJP pic.twitter.com/SHVXXHLz3A
— Dr Sudhakar K (Modi ka Parivar) (@DrSudhakar_) July 5, 2020