ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ; ಕೆಂಪಣ್ಣ ಆಯೋಗದ ವರದಿಯನ್ನು ತಕ್ಷಣ ಬಹಿರಂಗಪಡಿಸಲು ಎಎಪಿ ಒತ್ತಾಯ

ಬೆಂಗಳೂರು: ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತಂತೆ ತನಿಖೆ ನಡೆಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಬೇಕು. ತಕ್ಷಣ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ಆಮ್‌ ಆದ್ಮಿ ಪಕ್ಷದ ಅಧ್ಯಕ್ಷ ಜಜಗದೀಶ್ ವಿ.ಸದಂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ..

ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಆಪ್ ನಾಯಕ ಜಜಗದೀಶ್ ವಿ.ಸದಂ,  ಆರ್ಕಾವತಿಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಒಟ್ಟು 880 ಎಕರೆ ರಿಡೂ ಮಾಡಲಾಗಿದೆ. ಇದರ ಮೌಲ್ಯ ಅಂದಾಜು 8,000 ಕೋಟಿ ರೂ. ಆಗಿದೆ. 2014ರಲ್ಲಿ ಸಿದ್ದರಾಮಯ್ಯ ಅವರು 1952ರ ವಿಚಾರಣಾ ಆಯೋಗದ ಕಾಯ್ದೆಯ ಪ್ರಕಾರ ನ್ಯಾಯಮೂರ್ತಿ ಕೆಂಪಣ್ಣ ಅವರನ್ನು ವಿಚಾರಣಾ ಆಯೋಗದ ನೇತೃತ್ವ ವಹಿಸಲು ನೇಮಿಸಿದ್ದರು. ನ್ಯಾ. ಕೆಂಪಣ್ಣ ಅವರು ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಹಲವು ವರ್ಷಗಳೇ ಕಳೆದರೂ ಇದುವರೆಗೆ ಮುಖ್ಯಮಂತ್ರಿಗಳ ಕಾರ್ಯಾಲಯವು ಈ ವರದಿಯನ್ನು ಸಾರ್ವಜನಿಕ ಪರಿಶೀಲನೆಗೆ ಲಭ್ಯವಾಗುವಂತೆ ಮಾಡಿಲ್ಲ. ಸರ್ಕಾರದ ಈ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪಾರದರ್ಶಕತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದರು.

ನ್ಯಾಯಾಂಗ ತನಿಖಾ ವರದಿಗಳನ್ನು ಸಾರ್ವಜನಿಕ ದಾಖಲೆಗಳೆಂದು ಪರಿಗಣಿಸಲಾಗುತ್ತದೆ ಮತ್ತು ಅವು ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳುವುದು ಸರ್ಕಾರದ ಬಾಧ್ಯತೆಯಾಗಿದೆ. ಹಾಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೆ ಕೆಂಪಣ್ಣ ಆಯೋಗದ ವರದಿಯನ್ನು ಬಿಡುಗಡೆ ಮಾಡಬೇಕು. ಕೆಂಪಣ್ಣ ಆಯೋಗದ ವರದಿಯನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡನೆ ಮಾಡಬೇಕು. ವರದಿ ಆಧಾರದ ಮೇಲೆ ಯಾರು ತಪ್ಪಿತಸ್ಥರು ಇದ್ದಾರೋ ಅವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ನಾಯಕರು ಈ ವಿಚಾರವಾಗಿ ವರದಿ ಬಹಿರಂಗಕ್ಕೆ ಆಗ್ರಹಿಸುತ್ತಿದ್ದಾರೆ. ಆದರೆ ಈ ಹಿಂದೆ ಅಧಿಕಾರದಲ್ಲಿ ಇದ್ದಾಗ ಏಕೆ ಕೆಂಪಣ್ಣ ಆಯೋಗದ ವರದಿಯನ್ನು ಬಹಿರಂಗ ಪಡಿಸಲಿಲ್ಲ, ಏಕೆ ಸದನದಲ್ಲಿ ಮಂಡಿಸಲಿಲ್ಲ? ಅಧಿಕಾರದಲ್ಲಿದ್ದಾಗ ಮೌನ ವಹಿಸಿದ್ದ ಬಿಜೆಪಿ ನಾಯಕರಿಗೆ ಈಗ ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ. ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳ ನಾಯಕರು ಪರಸ್ಪರ ಆರೋಪ ಮಾಡುತ್ತ ಪ್ರಕರಣದ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

Related posts