ಕನಿಷ್ಠ ₹15,000 ಗೌರವಧನ ನಿಗದಿಗೆ ಒತ್ತಾಯ; ಬಾಕಿ ಪ್ರೋತ್ಸಾಹಧನ ತಕ್ಷಣ ಪಾವತಿಸುವಂತೆ ಆಗ್ರಹ
ಬೆಂಗಳೂರು: ಆಶಾ ಕಾರ್ಯಕರ್ತೆಯರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟ ಹಾಗೂ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಅಕ್ಟೋಬರ್ 5ರಿಂದ 11ರವರೆಗೆ ರಾಜ್ಯಾದ್ಯಂತ ಪ್ರತಿಭಟನಾ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದ್ದಾರೆ.
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಆರೋಗ್ಯ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕಳೆದ ಒಂಬತ್ತು ವರ್ಷಗಳಲ್ಲಿ ಕೇವಲ ₹1,500 ಮಾತ್ರ ಗೌರವಧನ ಹೆಚ್ಚಳವಾಗಿದೆ. ಬೆಲೆ ಏರಿಕೆಗೆ ಅನುಗುಣವಾಗಿ ಗೌರವಧನ ಹೆಚ್ಚಳವಾಗದಿರುವುದರಿಂದ ದುಬಾರಿ ಜೀವನ ನಿರ್ವಹಣೆ ಕಷ್ಟಕರವಾಗಿದೆ. ವಿವಿಧ ರಾಜ್ಯಗಳಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಗಣನೀಯವಾಗಿ ಹೆಚ್ಚಿಸಲಾಗಿದ್ದರೂ, ರಾಜ್ಯದಲ್ಲಿ ವೇತನ ಹೆಚ್ಚಳದ ಕುರಿತು ಸರ್ಕಾರ ನೀಡಿದ್ದ ಭರವಸೆಗಳು ಈಡೇರಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಗೌರವಧನ ಮತ್ತು ಪ್ರೋತ್ಸಾಹಧನ ನಿಗದಿತ ಅವಧಿಯಲ್ಲಿ ಪಾವತಿಯಾಗುತ್ತಿಲ್ಲ. ಹಲವು ಜಿಲ್ಲೆಗಳಲ್ಲಿ ತಿಂಗಳುಗಳಿಂದ ಪ್ರೋತ್ಸಾಹಧನ ಬಾಕಿ ಉಳಿದಿದ್ದು, ನಿರ್ವಹಿಸಿದ ಕೆಲಸಕ್ಕೆ ಅನುಗುಣವಾಗಿ ಹಣ ಪಾವತಿಯಾಗದ ಕಾರಣ ಕಾರ್ಯಕರ್ತೆಯರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಆ್ಯಪ್ ಬಳಕೆಗೆ ಮೂಲಸೌಕರ್ಯ ಕಲ್ಪಿಸಲು ಒತ್ತಾಯ
ಮೊಬೈಲ್ ಸೌಲಭ್ಯ, ಸರ್ವರ್ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸದೆ ‘ಸಮಸ್ತ’ ಆ್ಯಪ್ ಮೂಲಕ ಕೆಲಸ ಮಾಡಲು ಒತ್ತಡ ಹೇರುತ್ತಿರುವುದಕ್ಕೆ ಸಂಘಟನೆ ಆಕ್ಷೇಪ ವ್ಯಕ್ತಪಡಿಸಿದೆ. ಆಶಾ ಕಾರ್ಯಕರ್ತೆಯರು ಡಿಜಿಟಲೀಕರಣಕ್ಕೆ ವಿರೋಧಿಗಳಲ್ಲ. ಆದರೆ, ಮೂಲಸೌಕರ್ಯಗಳಿಲ್ಲದೆ ಆ್ಯಪ್ ಮೂಲಕ ಕೆಲಸ ಮಾಡುವಂತೆ ಒತ್ತಾಯಿಸುವುದು ಸಮಂಜಸವಲ್ಲ. ಭೌತಿಕ ಮತ್ತು ಡಿಜಿಟಲ್ ದಾಖಲೆಗಳನ್ನು ನಿರ್ವಹಿಸುವುದರಿಂದ ಜನರಿಗೆ ಆರೋಗ್ಯ ಸೇವೆ ಒದಗಿಸಲು ಮೀಸಲಿಡಬೇಕಾದ ಸಮಯ ವ್ಯರ್ಥವಾಗುತ್ತಿದೆ ಎಂದು ಮುಖಂಡರು ಹೇಳಿದ್ದಾರೆ.
ರಾಜ್ಯ ಸರ್ಕಾರದ ಗೌರವಧನ ಮತ್ತು ಕೇಂದ್ರದ ಪ್ರೋತ್ಸಾಹಧನ ಸೇರಿ ಕನಿಷ್ಠ ₹15,000 ನಿಗದಿಪಡಿಸಬೇಕು, ಬಾಕಿ ಹಣವನ್ನು ತಕ್ಷಣ ಖಾತೆಗಳಿಗೆ ಜಮೆ ಮಾಡಬೇಕು ಹಾಗೂ ಪ್ರತಿ ತಿಂಗಳು ನಿಗದಿತ ಸಮಯಕ್ಕೆ ಪಾವತಿಸಬೇಕು ಎಂದು ಆಗ್ರಹಿಸಿದ್ದಾರೆ. ಮೊಬೈಲ್ ಸೌಲಭ್ಯ ಒದಗಿಸಿ, ಆ್ಯಪ್ ಬಳಕೆಯ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಸಂಘದ ಮುಖಂಡರು ಎಚ್ಚರಿಸಿದ್ದಾರೆ.

