ಶ್ರೀನಗರ: ದೆಹಲಿ ಸ್ಫೋಟದ ಬೆನ್ನಲ್ಲೇ ಕಣಿವೆ ರಾಜ್ಯ ಮತ್ತೆ ಆತಂಕಕ್ಕೆ ಒಳಗಾಗಿದೆ. ಜಮ್ಮು–ಕಾಶ್ಮೀರದ ಶ್ರೀನಗರದ ನೌಗಾಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಆರು ಮಂದಿ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಉಗ್ರರಿಂದ ವಶಪಡಿಸಿಕೊಂಡಿದ್ದ ಸ್ಫೋಟಕ ವಸ್ತುಗಳು ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ ತನಿಖೆ ಮುಂದುವರೆಸಿವೆ.
ಹರಿಯಾಣದ ಫರಿದಾಬಾದ್ನಲ್ಲಿ ವಶಪಡಿಸಿಕೊಂಡಿದ್ದ ಸ್ಫೋಟಕ ವಸ್ತುಗಳ ಮಾದರಿಯನ್ನು ನೌಗಾಮ್ ಪೊಲೀಸ್ ಠಾಣೆಯಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಸುಮಾರು 360 ಕಿಲೋಗ್ರಾಂ ತೂಕದ ಸ್ಫೋಟಕಗಳಲ್ಲಿ ಹೆಚ್ಚಿನ ಪ್ರಮಾಣದ ವಸ್ತುಗಳನ್ನು ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿದ್ದ ಇದೇ ಠಾಣೆಯಲ್ಲಿ ಇಡಲಾಗಿತ್ತು. ಸಂಗ್ರಹಣೆಯ ಸಮಯದಲ್ಲೇ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ 6 ಪೊಲೀಸರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡವರಿಗೆ ಸಮೀಪದ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
