ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸೆ ಕಡ್ಡಾಯ; ಉಪ ಲೋಕಾಯುಕ್ತರ ಸೂಚನೆ

ಬೆಂಗಳೂರು: ರಾಜಧಾನಿಯ ಎಲ್ಲಾ ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಯಾಣಿಕರ ತುರ್ತು ಆರೋಗ್ಯ ಸೇವೆಗಾಗಿ ಪ್ರಥಮ ಚಿಕಿತ್ಸೆ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸುವಂತೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಬಿಎಂಟಿಸಿಗೆ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ರಾಮಮೂರ್ತಿನಗರದಿಂದ ಶಿವಾಜಿನಗರಕ್ಕೆ ತೆರಳುತ್ತಿದ್ದ ಹಿರಿಯ ನಾಗರಿಕರೊಬ್ಬರು ಬಸ್‌ ನಿಲ್ದಾಣ ತಲುಪುತ್ತಿದ್ದಂತೆ ಅಪಸ್ಮಾರದಿಂದ ಕುಸಿದು ಬಿದ್ದಿದ್ದರು. ಆದರೆ, ಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಕಿಟ್‌ ಅಥವಾ ತಕ್ಷಣದ ವೈದ್ಯಕೀಯ ನೆರವು ಲಭ್ಯವಿರಲಿಲ್ಲ.

ಚಾಲಕ ಮತ್ತು ನಿರ್ವಾಹಕರು ಪ್ರಯಾಣಿಕರನ್ನು ಆಸ್ಪತ್ರೆಗೆ ಕರೆದೊಯ್ಯಲು ಹರಸಾಹಸಪಟ್ಟಿದ್ದು, ಚಿಕಿತ್ಸೆ ದೊರೆಯಲು 30 ನಿಮಿಷಕ್ಕೂ ಹೆಚ್ಚು ಕಾಲ ವಿಳಂಬವಾಗಿದೆ ಎಂದು ವರದಿಯಾಗಿತ್ತು.

ಸುದ್ದಿ ಆಧರಿಸಿ ಸ್ವಯಂಪ್ರೇರಿತ ಪ್ರಕರಣ

ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಅಕ್ಟೋಬರ್‌ 12ರೊಳಗೆ ವಿವರಣೆ ನೀಡುವಂತೆ ಬಿಎಂಟಿಸಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಶಾಂತಿನಗರ ಬಸ್‌ ನಿಲ್ದಾಣ ಹೊರತುಪಡಿಸಿ ನಗರದ ಬಹುತೇಕ ಬಿಎಂಟಿಸಿ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಸೌಲಭ್ಯ ಇಲ್ಲ ಎಂಬ ಅಂಶವೂ ಬೆಳಕಿಗೆ ಬಂದಿದೆ.

ಜೀವಿಸುವ ಹಕ್ಕಿನ ಉಲ್ಲಂಘನೆ

ತುರ್ತು ಸಂದರ್ಭದಲ್ಲಿ ಪ್ರಯಾಣಿಕರಿಗೆ ವೈದ್ಯಕೀಯ ನೆರವು ಕಲ್ಪಿಸುವಲ್ಲಿ ಬಿಎಂಟಿಸಿ ಅಧಿಕಾರಿಗಳ ವೈಫಲ್ಯವು ಸಂವಿಧಾನದ 21ನೇ ವಿಧಿಯಡಿ ಖಾತರಿಪಡಿಸಿರುವ ಜೀವಿಸುವ ಹಕ್ಕಿನ ಉಲ್ಲಂಘನೆಯಾಗಬಹುದು ಎಂದು ನ್ಯಾಯಮೂರ್ತಿ ಫಣೀಂದ್ರ ಅಭಿಪ್ರಾಯಪಟ್ಟಿದ್ದಾರೆ.

ಆಡಳಿತಾತ್ಮಕ ಲೋಪಗಳನ್ನು ಸರಿಪಡಿಸುವ ಉದ್ದೇಶದಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆ, 1984ರ ಸೆಕ್ಷನ್‌ 12(1)ರಡಿ ಸ್ವಯಂಪ್ರೇರಿತ ವಿಚಾರಣೆ ಆರಂಭಿಸಲಾಗಿದೆ.

Related posts