ಬೆಂಗಳೂರು: ರಾಜಧಾನಿ ಶಾಲೆಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆಯ ಸಂದೇಶ ರವಾನಿಸಿದ್ದು ಈ ಸುದ್ದಿಯಿಂದಾಗಿ ಜನತೆ ಬೆಚ್ಚಿ ಬಿದ್ದಿದ್ದಾರೆ. ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ- ಮೇಲ್ ಬಂದಿವೆ ಎನ್ನಲಾಗಿದೆ.
ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಪೊಲೀಸರು ಶಾಲೆಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಶಾಲೆಗಳ ಮಕ್ಕಳನ್ನು ಮನೆಗೆ ವಾಪಸ್ ಕಳುಹಿಸಿದ್ದಾರೆ.
ಮಹದೇವಪುರದ ಗೋಪಾಲನ್ ಇಂಟನ್ರ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್‍ನಲ್ಲಿ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಗಳು ಬೆದರಿಸಿದ್ದರು. ಕೂಡಲೇ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿ ದೌಡಾಯಿಸಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆಯಿಂದ ಪೋಷಕರು ಬೆಚ್ಚಿ ಬಿದ್ದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್, ಯಾವುದೇ ಅನಾಹುತಕ್ಕೆ ಅವಕಾಶ ನೀಡುವುದಿಲ್ಲ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಭೀತಿಗೊಳಗಾಗಬಾರದು ಎಂದು ಧೈರ್ಯ ಹೇಳಿದ್ದಾರೆ.