ಬೆಂಗಳೂರು: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ನಿತ್ಯ 3000 ಕ್ಯೂಸೆಕ್ ನೀರು ಹರಿಸಲು ಕಾವೇರಿ ಜಲ ನಿಯಂತ್ರಣ ಸಮಿತಿ ರಾಜ್ಯಕ್ಕೆ ಆದೇಶ ನೀಡಿದೆ. ಈ ಆದೇಶದಿಂದ ರಾಜ್ಯದ ರೈತರು ಮತ್ತೊಮ್ಮೆ ಆಘಾತಕ್ಕೊಳಗಾಗಿದ್ದಾರೆ. ಈ ಆದೇಶವು ರಾಜ್ಯದ ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕರ್ನಾಟಕ ಜಲಸಂರಕ್ಷಣಾ ಸಮಿತಿ ಮುಖಂಡರೂ ಆಗಿರುವ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ಕಾವೇರಿ ಜಲ ನಿಯಂತ್ರಣ ಸಮಿತಿಯ ಆದೇಶ ಕುರಿತಂತೆ ಪ್ರತಿಕ್ರಿಯಿಸಿರುವ ಕುರುಬೂರು ಶಾಂತಕುಮಾರ್, ರೈತರಿಗೆ ಮತ್ತೊಮ್ಮೆ ಕಾವೇರಿ ಆಘಾತ, ಇನ್ನೊಂದೆಡೆ ವಿದ್ಯುತ್ ಸಂಕಷ್ಟ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎನ್ನುವ ಎದೆಗಾರಿಕೆ ಸರ್ಕಾರಕ್ಕೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಗೆ ಮತ್ತೆ ಮುಂದಿನ 15 ದಿನಗಳ ಕಾಲ ನಿತ್ಯ 3000 ಕ್ಯೂಸೆಕ್ ನೀರು ಹರಿಸಲು ಕಾವೇರಿ ಜಲ ನಿಯಂತ್ರಣ ಸಮಿತಿ ರಾಜ್ಯಕ್ಕೆ ಆದೇಶ ನೀಡಿರುವ ರಾಜ್ಯದ ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ಮೂಡಿಸುತ್ತಿದೆ. ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದ ರೈತರು ಒಂದು ಬೆಳೆ ಬೆಳೆದಿಲ್ಲ ಸಮರ್ಪಕವಾಗಿ ನೀರು ಹರಿದಿಲ್ಲ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ, ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷರೂ ಆಗಿರುವ ಕುರುಬೂರು ಶಾಂತಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು. ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ. ಈ ಆದೇಶವನ್ನು ದಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ. ರೈತರು ಜನರು ಸಂಘಟಿತರಾಗಿ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು, ಒಂದು ಕಡೆ ವಿದ್ಯುತ್ ಕಣ್ಣು ಮುಚ್ಚಾಲೆ ಸಂಕಷ್ಟದಿಂದ ರೈತರು ಕಂಗೆಟ್ಟಿದ್ದಾರೆ. ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ರಾಜ್ಯ ಸರ್ಕಾರ ಸಾಗುತ್ತಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.