ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ವಿವಾದಾತ್ಮಕ ಹೇಳಿಕೆಯನ್ನು ಮುಂದಿಟ್ಟು ಕಾಂಗ್ರೆಸ್ ಯಡಿಯೂರಪ್ಪ ಸರ್ಕಾರದ ವಿರುದ್ಧ ಸಮರ ಕೈಗೊಂಡಿದೆ.
ಯತ್ನಾಳ್ ಅವರು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿರುವುದನ್ನು ಪ್ರತಿಭಟಿಸಿ ವಿಧಾನಸಭೆಯಲ್ಲಿ ಗದ್ದಲ ಎಬ್ಬಿಸಿರುವ ಕಾಂಗ್ರೆಸ್, ಈ ಪ್ರಕರಣ ಕುರಿತು ರಾಜ್ಯಪಾಲರಿಗೆ ದೂರು ನೀಡಿದೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ನಿಯೋಗ ರಾಜ್ಯಪಾಲರಿಗೆ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದೆ.
ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಮಾಡಿದ ಅವಮಾನವಾಗಿದೆ. ಇದು ಸಂವಿಧಾನಕ್ಕೆ ಮಾಡುವ ಅಪಮಾನ ಎಂದು ದೂರಿದರು. ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಯತ್ನಾಳ್ ಶಾಸಕರಾಗಿ ಮುಂದುವರೆಯುವ ಅರ್ಹತೆ ಕಳೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.