ಬೆಂಗಳೂರು: ರಾಜಧಾನಿ ಸುತ್ತಮುತ್ತಲ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಕಳೆದ ಎಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಆಹಾರ ಧಾನ್ಯಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂವು ಸೇರಿದಂತೆ ಅನೇಕ ತೋಟಗಾರಿಕಾ ಬೆಳೆಗಳು ನಾಶವಾಗಿದ್ದು, ಈ ವರ್ಷವಾದರೂ ಉತ್ತಮ ಬೆಳೆ ಆಗಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಕೈಯಿಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಪರಿಸ್ಥಿತಿ ಎದುರಾಗಿದೆ. ಹಲವಾರು ಕಡೆ ಕಟಾವಿಗೆ ಬಂದಿದ್ದ ಬೆಳೆಗಳು ಮಳೆಯಿಂದ ನಾಶವಾಗಿವೆ. ಅನೇಕ ಕಡೆ ಬೆಳೆಗಳಿಗೆ ಕೊಳೆರೋಗ, ಸುಟ್ಟರೋಗ ಬಂದು ಹಾಳಾಗಿವೆ. ರೈತರು ಇಂತಹ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದರೂ ಮುಖ್ಯಮಂತ್ರಿಗಳಾಗಲಿ, ಕೃಷಿ ಸಚಿವ ಚೆಲುವರಾಯಸ್ವಾಮಿ ಅವರಾಗಲಿ, ಕಂದಾಯ ಸಚಿವ ಕೃಷ್ಣ ಬೈರೇಗೌಡರಾಗಲೀ ರೈತರ ಸಂಕಷ್ಟದ ಬಗ್ಗೆ ಈವರೆಗೂ ಚಕಾರ ಎತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ರೈತರ ಜಮೀನುಗಳಿಗೆ ಹೋಗಿ ಧೈರ್ಯ ಹೇಳಬೇಕಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರುಗಳ, ಶಾಸಕರು ಈವರೆಗೂ ಆಕಡೆ ತಲೆ ಹಾಕಿಲ್ಲ. ಮುಖ್ಯಮಂತ್ರಿಗಳಿಗೆ ಕುರ್ಚಿ ಉಳಿಸಿಕೊಳ್ಳುವ ಯೋಚನೆ ಆದರೆ ಸಚಿವರಿಗೆ ಮುಂದಿನ ಸಚಿವ ಸಂಪುಟದಲ್ಲಿ ಸ್ಥಾನ ಉಳಿಸಿಕೊಳ್ಳುವ ಯೋಚನೆ. ಇನ್ನು ಶಾಸಕರ ಅನುದಾನದ ಚಿಂತೆ. ಒಟ್ಟಿನಲ್ಲಿ ಈ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದಲ್ಲಿ ನಾಡಿನ ರೈತರು ದಿಕ್ಕಿಲ್ಲದ ಅನಾಥರಾಗಿದ್ದಾರೆ ಎಂದು ಅಶೋಕ್ ಬೇಸರ ವ್ಯಕ್ತಪಡಿಸಿದ್ದಾರೆ.
‘ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು’ ಎಂಬಂತೆ, ಕಾಂಗ್ರೆಸ್ ಪಕ್ಷದ ಕುರ್ಚಿ ಗುದ್ದಾಟದಲ್ಲಿ ನಾಡಿನ ರೈತರು ದಿಕ್ಕಿಲ್ಲದೆ ಅನಾಥವಾಗಿದ್ದಾರೆ.
ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಕಳೆದ ಎಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಆಹಾರ ಧಾನ್ಯಗಳು, ವಾಣಿಜ್ಯ ಬೆಳೆಗಳು, ತರಕಾರಿ,…
— R. Ashoka (@RAshokaBJP) October 19, 2024
ಕಳೆದ ವರ್ಷ ಬರ ಪರಿಸ್ಥಿತಿ ಇದ್ದಾಗ ಸರಿಯಾದ ಸಮಯಕ್ಕೆ ಸಮೀಕ್ಷೆ ನಡೆಸದೆ, ರಾಜಕೀಯ ಮಾಡುವುದರಲ್ಲೇ ಕಾಲಹರಣ ಮಾಡಿದ್ದ ಕಾಂಗ್ರೆಸ್ ಸರ್ಕಾರ, ಈಗಲಾದರೂ ಮತ್ತೆ ಅದೇ ತಪ್ಪು ಮಾಡುತ್ತಿದೆ ಎಂದು ಅಶೋಕ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1,500ಕ್ಕು ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗ ಇನ್ನಷ್ಟು ರೈತರು ಪ್ರಾಣ ಕಳೆದುಕೊಳ್ಳುವ ಯೋಚನೆ ಮಾಡುವ ಮುನ್ನ ಸರ್ಕಾರ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಕೃಷಿ ಸಚಿವರನ್ನು ಹಾಗು ಕಂದಾಯ ಸಚಿವರನ್ನು ಒತ್ತಾಯಿಸಿದ್ದಾರೆ.