ತಿರುವನಂತಪುರ: ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಳ್ಳದೆ ಪ್ರಕ್ರಿಯೆಯನ್ನು ತಡೆಹಿಡಿದಿದೆ. ಅಧ್ಯಕ್ಷ ಸ್ಥಾನಕ್ಕಾಗಿ ಪಕ್ಷದ ಪ್ರಮುಖ ನಾಯಕರ ನಡುವೆ ತೀವ್ರ ಪೈಪೋಟಿ ಹಾಗೂ ಲಾಬಿ ನಡೆಯುತ್ತಿರುವುದು ಈ ವಿಳಂಬಕ್ಕೆ ಕಾರಣ ಎನ್ನಲಾಗಿದೆ.
ಹಾಲಿ ಅಧ್ಯಕ್ಷ ಸನ್ನಿ ಜೋಸೆಫ್ ಅವರನ್ನು ಸಾಂಸ್ಥಿಕ ಚಟುವಟಿಕೆಗಳಲ್ಲಿ ಇನ್ನಷ್ಟು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಹೈಕಮಾಂಡ್ ಸೂಚಿಸಿದೆ ಎಂದು ತಿಳಿದುಬಂದಿದೆ. ಬುಧವಾರ ಸಂಜೆ ಅವರು ಪಕ್ಷದ ಕಚೇರಿ ‘ಇಂದಿರಾ ಭವನ’ದಲ್ಲಿ ಕಾಣಿಸಿಕೊಂಡಿರುವುದು, ಸದ್ಯಕ್ಕೆ ಅವರೇ ಅಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆಯ ಬಗ್ಗೆ ಚರ್ಚೆ ಹುಟ್ಟುಹಾಕಿದೆ.
ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಎರಡೂವರೆ ವರ್ಷಗಳ ಅಧಿಕಾರಾವಧಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿದಿದ್ದರು. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಕೂಡ ಮುಖ್ಯಮಂತ್ರಿಯಾದ ಬಳಿಕ ಕೆಲವು ತಿಂಗಳುಗಳ ಕಾಲ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು ಎಂದು ಸನ್ನಿ ಜೋಸೆಫ್ TNIEಗೆ ತಿಳಿಸಿದ್ದಾರೆ. ಕೆ. ಸುಧಾಕರನ್ ಅವರ ನಂತರ 2025ರ ಮೇ 8ರಂದು ಸನ್ನಿ ಜೋಸೆಫ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ಈಗ ಅಧ್ಯಕ್ಷ ಸ್ಥಾನಕ್ಕಾಗಿ ಬೆನ್ನಿ ಬೆಹನನ್, ಕೊಡಿಕುನ್ನಿಲ್ ಸುರೇಶ್ ಮತ್ತು ಅಜಯ್ ತರಾಯಿಲ್ ಸೇರಿದಂತೆ ಹಲವು ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ. ತಮ್ಮ ಪರ ಬೆಂಬಲ ಪಡೆಯಲು ಹಿರಿಯ ನಾಯಕರನ್ನು ಸಂಪರ್ಕಿಸುತ್ತಿದ್ದಾರೆ ಎನ್ನಲಾಗಿದೆ. ಕೆ.ಸಿ. ವೇಣುಗೋಪಾಲ್ ಅವರಿಗೆ ಆಪ್ತರೆಂದು ಗುರುತಿಸಿಕೊಂಡಿರುವ ಕಂದಾಯ ಸಚಿವ ಎ.ಪಿ. ಅನಿಲ್ ಕುಮಾರ್ ಅವರ ಹೆಸರೂ ಆಕಾಂಕ್ಷಿಗಳ ಪಟ್ಟಿಯಲ್ಲಿ ಕೇಳಿಬಂದಿದೆ.
ಕಾಂಗ್ರೆಸ್ ಮೂಲಗಳ ಪ್ರಕಾರ, ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಎಐಸಿಸಿ ಸಾಂಸ್ಥಿಕ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈವರೆಗೆ ಯಾವುದೇ ನಿರ್ದಿಷ್ಟ ಅಭ್ಯರ್ಥಿಯ ಪರ ಒಲವು ತೋರಿಸಿಲ್ಲ. ಹೊಸ ಅಧ್ಯಕ್ಷರು ರಾಜ್ಯ ಸರ್ಕಾರದೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂಬ ಅಭಿಪ್ರಾಯವನ್ನು ಸತೀಶನ್ ಹೈಕಮಾಂಡ್ ಮುಂದೆ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಮತ್ತೊಂದೆಡೆ, ಅಧ್ಯಕ್ಷರ ಆಯ್ಕೆಯ ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕೆ.ಸಿ. ವೇಣುಗೋಪಾಲ್ ಬಿಟ್ಟಿದ್ದಾರೆ ಎನ್ನಲಾಗಿದೆ.
ಇದೇ ವೇಳೆ, ರಾಷ್ಟ್ರೀಯ ಮಟ್ಟದಲ್ಲಿ ಹಲವು ಸವಾಲುಗಳನ್ನು ಎದುರಿಸುತ್ತಿರುವ ಕಾಂಗ್ರೆಸ್ ಹೈಕಮಾಂಡ್ ಕೇರಳದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಆತುರದ ನಿರ್ಧಾರಕ್ಕೆ ಮುಂದಾಗುತ್ತಿಲ್ಲ. ಮುಖ್ಯ ಚುನಾವಣಾಧಿಕಾರಿ ವಿರುದ್ಧದ ಪ್ರತಿಭಟನೆಯ ಮುಂದಿನ ಹಂತದ ಸಿದ್ಧತೆ, ಉತ್ತರ ಪ್ರದೇಶ ಮತ್ತು ಪಂಜಾಬ್ ವಿಧಾನಸಭಾ ಚುನಾವಣೆಗಳ ತಯಾರಿ, ಸೀಟು ಹಂಚಿಕೆ ಹಾಗೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗಳು ಪಕ್ಷದ ಆದ್ಯತೆಯಾಗಿವೆ.
ಕೇರಳ ಘಟಕದಲ್ಲಿ ಈಗಿರುವ ಅಧಿಕಾರ ಸಮತೋಲನಕ್ಕೆ ಧಕ್ಕೆಯಾಗದಂತೆ ಹಾಗೂ ಹೊಸ ಬಣ ಸಂಘರ್ಷಗಳಿಗೆ ಅವಕಾಶ ನೀಡದಂತೆ ನಿರ್ಧಾರ ಕೈಗೊಳ್ಳಲು ಹೈಕಮಾಂಡ್ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ ಎಂದು ವರದಿಯಾಗಿದೆ.

