ವೆನ್ಲಾಕ್ ಆಸ್ಪತ್ರೆ ವಿವಾದ: ಕೊರೋನಾ ಅಪಪ್ರಚಾರ ಬಗ್ಗೆ ಕೇಸ್

ಮಂಗಳೂರು: ಕೊರೋನಾ ವೈರಸ್ ವಿಚಾರದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ವಿವಾದದ ಕೇಂದ್ರಬಿಂದುವಾಗಿದೆ. ಅವ್ಯವಸ್ಥೆ ಹಾಗೂ ಅಸಮರ್ಪಕ ನಿರ್ವಹಣೆಯಿಂದಾಗಿ ಕೊರೋನಾ ಹರಡುವಂತಾಗಿದೆ ಎಂದು ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ವೆನ್ ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಅಧೀಕ್ಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸೈಬರ್ ಪೊಲೀಸರಿಗೆ ಹಾಗೂ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಕೊರೋನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆಗೆ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿರುವ ಅಧೀಕ್ಷಕರು, ವೆನ್‍ಲಾಕ್ ಆಸ್ಪತ್ರೆಯಲ್ಲಿ ಕೋವಿಡ್-19 ಸಂಶಾಯಾಸ್ಪದ ಪ್ರಕರಣಗಳಿಗೆ 8 ವಿಶೇಷ ಪ್ರತ್ಯೇಕ ಕೊಠಡಿಗಳನ್ನು ಕಾದಿರಿಸಲಾಗಿದೆ. ಸಂಶಯಾಸ್ಪದ ಪ್ರಕರಣಗಳು ಬಂದರೆ, ಅಂತಹ ರೋಗಿಗಳನ್ನು ಈ ಕೊಠಡಿಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬೊಬ್ಬರನ್ನು ಒಂದೊಂದು ಕೊಠಡಿಗೆ ಕಾದಿರಿಸಿ ದಾಖಲಿಸಲಾಗುತ್ತಿದೆ. ಅವರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಪರೀಕ್ಷೆ ನೆಗೆಟಿವ್ ಬಂದರೆ ಅವರಿಗೆ 14 ದಿನಗಳ ನಿಗಾವಣೆಯಲ್ಲಿರಲು ಸೂಚನೆ ನೀಡಿ ಮನೆಗೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಿಟಿವ್ ಬಂದರೆ, ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗದರ್ಶಿಯಂತೆ ಚಿಕಿತ್ಸೆ ಕೊಡಲಾಗುತ್ತದೆ. ಇದಕ್ಕಾಗಿ ಮಾನ್ಯ ಜಿಲ್ಲಾಧಿಕಾರಿಗಳ ಆದೇಶದಂತೆ, ವೆನ್ ಲಾಕ್ ನಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷವಾದ ಪ್ರತ್ಯೇಕ ಕೊಠಡಿಗಳಲ್ಲಿ ಈ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತೀ ರೋಗಿಗೂ ಎಲ್ಲ ರೀತಿಯ ಜೈವಿಕ ಮೆಡಿಕಲ್ ವ್ಯವಸ್ಥೆ ಕಲ್ಪಿಸಿ, ಇಲಾಖೆಯ ಮಾರ್ಗಸೂಚಿಗಳಂತೆ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ವೆನ್ ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ 19 ಬಗ್ಗೆ ಜಾಗೃತಿ, ಮಾಹಿತಿ ನೀಡಲು ಹೆಲ್ಪ್ ಡೆಸ್ಕ್ ಅಲ್ಲಲ್ಲಿ ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Related posts