ನವದೆಹಲಿ: ದೆಹಲಿ ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿ ವಾಯುಮಾಲಿನ್ಯ ನಿಯಂತ್ರಣ ಕ್ರಮಗಳನ್ನು ತೀವ್ರಗೊಳಿಸುವಂತೆ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಚಳಿಗಾಲದಲ್ಲಿ ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ-ಎನ್ಸಿಆರ್ ವ್ಯಾಪ್ತಿಯಲ್ಲಿ ಸಮನ್ವಯದೊಂದಿಗೆ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.
ದೆಹಲಿ, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರಮಟ್ಟದ ಮೇಲ್ವಿಚಾರಣೆ ಹಾಗೂ ಅಧಿಕಾರಿಗಳ ಹೊಣೆಗಾರಿಕೆಗೆ ಒತ್ತು ನೀಡಿದರು. ಪ್ರಮುಖ ನಗರಗಳಲ್ಲಿ ಮಾಲಿನ್ಯ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಲು ಹಿರಿಯ ಅಧಿಕಾರಿಗಳನ್ನು ನೇಮಿಸಿ, ವಾಯು ಗುಣಮಟ್ಟ ನಿರ್ವಹಣಾ ಆಯೋಗಕ್ಕೆ (ಸಿಎಕ್ಯೂಎಂ) ವಾರದ ಪ್ರಗತಿ ವರದಿ ಸಲ್ಲಿಸುವಂತೆ ಸೂಚಿಸಿದರು.

ನವೆಂಬರ್ 30ರ ನಂತರ ತಪ್ಪಿತಸ್ಥ ಸಾರಿಗೆ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಎಚ್ಚರಿಕೆ ನೀಡಿದರು. ವಾಹನಗಳ ನಂಬರ್ ಪ್ಲೇಟ್ ಗುರುತಿಸಲು ಎಎನ್ಪಿಆರ್ ಕ್ಯಾಮೆರಾಗಳ ಅಳವಡಿಕೆಗೂ ಸೂಚಿಸಿದರು. ಮಾಲಿನ್ಯ ನಿಯಂತ್ರಣ ಸಾಧನಗಳನ್ನು ಅಳವಡಿಸದ 191 ಕೈಗಾರಿಕೆಗಳನ್ನು ಮುಚ್ಚುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡಿದರು.
ರಸ್ತೆ ಧೂಳು ನಿಯಂತ್ರಣಕ್ಕೆ ಗುರುತಿಸಿದ್ದ 5,480 ಕಿ.ಮೀ. ರಸ್ತೆಗಳಲ್ಲಿ ಕೇವಲ 3,221 ಕಿ.ಮೀ. ರಸ್ತೆಗಳ ಅಭಿವೃದ್ಧಿ ಪೂರ್ಣಗೊಂಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. 233 ಸಂಚಾರ ದಟ್ಟಣೆ ಸ್ಥಳಗಳಲ್ಲಿ ರಸ್ತೆ ದುರಸ್ತಿ, ಯಾಂತ್ರಿಕ ಸ್ವಚ್ಛತೆ ಹಾಗೂ ಸಂಚಾರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಇದಲ್ಲದೆ, ಹಳೆಯ ವಾಣಿಜ್ಯ ವಾಹನಗಳ ಬದಲಾವಣೆ, ಕೈಗಾರಿಕಾ ಮಾಲಿನ್ಯ ನಿಯಂತ್ರಣ ಮತ್ತು ತ್ಯಾಜ್ಯ ಸಂಸ್ಕರಣೆಗೆ ಆದ್ಯತೆ ನೀಡುವಂತೆ ತಿಳಿಸಿದರು. ಪ್ರತಿದಿನ 6,747 ಟನ್ ಘನತ್ಯಾಜ್ಯ ಸಂಸ್ಕರಣೆಯ ಕೊರತೆಯನ್ನು ನಿವಾರಿಸಿ, ತ್ಯಾಜ್ಯವನ್ನು ಬಹಿರಂಗವಾಗಿ ಸುರಿಯುವುದು ಮತ್ತು ಸುಡುವುದನ್ನು ತಡೆಯುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಿದರು.
ಮಾರುಕಟ್ಟೆ, ಶಾಲೆ, ಆಸ್ಪತ್ರೆ, ರೈಲು ನಿಲ್ದಾಣ ಮತ್ತು ಬಸ್ ನಿಲ್ದಾಣಗಳಂತಹ ಮಾಲಿನ್ಯ ಹೆಚ್ಚಿರುವ ಪ್ರದೇಶಗಳಲ್ಲಿ ವಿಶೇಷ ಕ್ರಮ ಕೈಗೊಳ್ಳಲು ಹಾಗೂ ತಂತ್ರಜ್ಞಾನ ಆಧಾರಿತ ಮೇಲ್ವಿಚಾರಣೆ ಬಲಪಡಿಸಲು ಸಚಿವರು ಸೂಚಿಸಿದರು.

