ಬೆಂಗಳೂರು: ಡಿ,ಕೆ.ಶಿವಕುಮಾರ್ ವಿರುದ್ಧ ಹಿಂದಿನ ಸರ್ಕಾರ ಹೊರಡಿಸಿದ್ದ ಸಿಬಿಐ ತನಿಖೆ ಆದೇಶವನ್ನು ಕಾಂಗ್ರೆಸ್ ಪಕ್ಷ ಸಮರ್ಥಿಸಿಕೊಂಡಿದೆ. ಈ ಕುರಿತ ಸಂಪುಟ ನಿರ್ಧಾರಬಗ್ಗೆ ಪ್ರತಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕರು ಈ ವಿಚಾರದಲ್ಲಿ ಅಧಿವೇಶನದಲ್ಲಿ ಚರ್ಚೆಗೆ ಸಿದ್ದ ಎಂದು ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ (ಡಿಎ) ಪ್ರಕರಣವನ್ನು ಹಿಂಪಡೆಯುವ ಸಂಪುಟ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಸಮರ್ಥಿಸಿಕೊಂಡಿದ್ದಾರೆ. ಇದೇ ವೇಳೆ, ಬಿಜೆಪಿ ನಾಯಕರ ಟೀಕೆ ಕುರಿತಂತೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಈ ವಿಚಾರವಾಗಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ನಡೆಸಿ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಕುರಿತಂತೆ ಬಿಜೆಪಿ ನಾಯಕರು ಅನಗತ್ಯ ಟೀಕೆ ಮಾಡುತ್ತಿದ್ದಾರೆ ಎಂದರು. ಕರ್ನಾಟಕದ ಇತಿಹಾಸದಲ್ಲಿ ಯಡಿಯೂರಪ್ಪ ಅವರ ಪ್ರಕರಣ ಸೇರಿದಂತೆ ಯಾವುದೇ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ವಿಚಾರಣೆ ನಡೆಸಿಲ್ಲ ಎಂದು ಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ಎದಿರೇಟು ನೀಡಿದ್ದಾರೆ.